ಬೃಹತ್ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಮೀನುಗಾರನ ಶವ

0
57

8 ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಬೃಹತ್ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹವು ಎಂಟು ದಿನಗಳ ಬಳಿಕ ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಪತ್ತೆಯಾಗಿದೆ.

ಮೃತರನ್ನು ಕುಂದಾಪುರ ಮೂಲದ ನಾರಾಯಣ (31) ಎಂದು ಗುರುತಿಸಲಾಗಿದೆ. ಅವರು ಆ.9ರಂದು ಮಂಗಳೂರಿನ ಧಕ್ಕೆಯಿಂದ ‘ಓಷಿಯನ್ ಸ್ಟಾರ್’ ಹೆಸರಿನ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಬೋಟ್ ಸಮುದ್ರದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಅಲೆಯೊಂದು ದೋಣಿಗೆ ಅಪ್ಪಳಿಸಿದ್ದು, ಈ ವೇಳೆ ನಾರಾಯಣ ಅವರು ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.

ಘಟನೆ ಬಳಿಕ ಬೋಟ್‌ನಲ್ಲಿದ್ದವರು ಹಾಗೂ ಬೋಟ್ ಮಾಲೀಕರು ನಾರಾಯಣ ಅವರಿಗಾಗಿ ಹುಡುಕಾಟ ಆರಂಭಿಸಿದ್ದರು. ಕುಟುಂಬಸ್ಥರೂ ಆತಂಕದಿಂದ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದರು. ನಾಪತ್ತೆ ಕುರಿತು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಎಂಟು ದಿನಗಳ ನಿರಂತರ ಹುಡುಕಾಟದ ಬಳಿಕ ಸೋಮವಾರ ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಂತರ ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ (UDR) ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.