ಸದಾನಂದ ನಾಯಕ ಸಾವು ಪ್ರಕರಣ : ಅರಣ್ಯ ಇಲಾಖೆ ವಿರುದ್ಧ ಹೆಬ್ರಿಯಲ್ಲಿ ಪ್ರತಿಭಟನಾ ಮೆರವಣಿಗೆ

0
6

ಹೆಬ್ರಿ : ಕಳೆದ ಆ.7ರಂದು ಸಂಜೆ ಹೆಬ್ರಿಯ ಹುತ್ತೂರ್ಕೆ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದು ಕಳ್ತೂರು ಸಂತೆಕಟ್ಟೆಯ ನಿವಾಸಿ ಸದಾನಂದ ನಾಯಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ರಸ್ತೆ ಬದಿಯ ಅಪಾಯಕಾರಿ, ಒಣಗಿದ ಹಾಗೂ ರಸ್ತೆಗೆ ವಾಲಿಕೊಂಡಿರುವ ಮರಗಳನ್ನು ತೆರವುಗೊಳಿಸುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರಗತಿಪರ ಹಿರಿಯ ನಾಗರಿಕರ ವೇದಿಕೆ, ಹೆಬ್ರಿ ಆರೋಪಿಸಿದೆ. ಇಲಾಖೆಯ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ಸಂಭವಿಸಿದ್ದು, ಅಮಾಯಕ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ವೇದಿಕೆ ಆರೋಪಿಸಿದೆ.

ಸದಾನಂದ ನಾಯಕರ ಕುಟುಂಬಕ್ಕೆ ಸಾಂತ್ವನ ಹೇಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಈವರೆಗೆ ಭೇಟಿ ನೀಡಿಲ್ಲ ಹಾಗೂ ಯಾವುದೇ ಪರಿಹಾರ ಘೋಷಿಸಿಲ್ಲ ಎಂದು ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 20ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಹೆಬ್ರಿ ಬಸ್ ನಿಲ್ದಾಣದಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಹೆಬ್ರಿ ಹಾಗೂ ಸಂತೆಕಟ್ಟೆ ಪರಿಸರದ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸದಾನಂದ ನಾಯಕರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಜೊತೆಗೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವಂತೆ ವೇದಿಕೆ ಮನವಿ ಮಾಡಿದೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.