ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ

0
57

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ಹೃದಯಾಘಾತದಿಂದ ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು. ಬೆಂಗಳೂರಿನಲ್ಲಿರುವ ತಮ್ಮ ಸಹೋದರಿಯ ಮನೆಯಲ್ಲಿ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ವೀಣಾ, ಪುತ್ರ ವಿಶ್ವದೀಪ್ ಹಾಗೂ ಪುತ್ರಿ ಶಾರದಾ ಅವರನ್ನು ಅಗಲಿದ್ದಾರೆ.

ಬಿ.ಸಿ. ನಾಗೇಶ್ ಅವರು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2013ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಬಳಿಕ 2018ರಲ್ಲಿ ಮತ್ತೆ ತಿಪಟೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

1959ರ ಜುಲೈ 1ರಂದು ಜನಿಸಿದ ಬಿ.ಸಿ. ನಾಗೇಶ್ ಅವರು ತುಮಕೂರು ಜಿಲ್ಲಾ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆಯಿಂದ ರಾಜಕೀಯ ಪ್ರವೇಶಿಸಿದ ಅವರು, ತಿಪಟೂರು ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸರಳ ನಡೆ, ಸಂಘಟನಾ ಚಟುವಟಿಕೆ ಹಾಗೂ ಶಿಕ್ಷಣ ಕ್ಷೇತ್ರದ ವಿಚಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಬಿಜೆಪಿ ವಲಯದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದರು.

ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಬಳಿಕ ಪಾರ್ಥಿವ ಶರೀರವನ್ನು ಸ್ವಕ್ಷೇತ್ರ ತಿಪಟೂರಿಗೆ ಕೊಂಡೊಯ್ಯಲಾಗುವುದು. ತಿಪಟೂರಿನಲ್ಲಿಯೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕ್ಷೇತ್ರದ ಜನತೆ, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವರ ನಿಧನದಿಂದ ತಿಪಟೂರು ಕ್ಷೇತ್ರದಲ್ಲಿ ಹಾಗೂ ತುಮಕೂರು ಜಿಲ್ಲೆಯ ಬಿಜೆಪಿ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಗಣ್ಯರು ಹಾಗೂ ಸಾರ್ವಜನಿಕರು ಅವರ ನಿಧನಕ್ಕೆ ಕಂಬನಿ ಮಿಡಿದು, ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.