ಹೆಬ್ರಿಯಲ್ಲಿ ಆ.28ರಂದು ಅದ್ಧೂರಿ ಶ್ರೀ ನಾರಾಯಣ ಗುರು ಜಯಂತಿ : ಪೂರ್ವ ಸಿದ್ಧತಾ ಸಭೆ

0
27

ಸಭೆಯಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಭಾಗಿ

ಹೆಬ್ರಿ: ಹೆಬ್ರಿ ತಾಲ್ಲೂಕು ಆಡಳಿತದ ವತಿಯಿಂದ ಇದೇ 28ರಂದು ಜೂನಿಯರ್ ಕಾಲೇಜಿನಲ್ಲಿ ನಡೆಯಲಿರುವ ತಾಲ್ಲೂಕು ಮಟ್ಟದ ಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯು ಬುಧವಾರ ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ನಡೆಯಿತು.

ಹೆಬ್ರಿ ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ ಸಭೆಯ ಅಧ್ಯಕ್ಷತೆ ವಹಿಸಿ ಜಯಂತಿ ಆಚರಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಹಾನ್ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸುವ ಅಗತ್ಯವಿದೆ ಎಂದು ತಿಳಿಸಿದರು.

ಶ್ರೀ ನಾರಾಯಣ ಗುರುಗಳ ಸಾಮಾಜಿಕ ಸಮಾನತೆ, ಸಹೋದರತ್ವ ಹಾಗೂ ಮಾನವೀಯತೆಯ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಚಿಂತನೆಗಳು ಸಮಾಜದ ಪ್ರಗತಿಗೆ ದಾರಿದೀಪವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಅರಿತು ಮುನ್ನಡೆಯಬೇಕು ಎಂದು ಮಂಜುನಾಥ ಪೂಜಾರಿ ಹೇಳಿದರು.

ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಯುವಜನರು ಭಾಗವಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಹೆಬ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಬೇಳಂಜೆ ಹರೀಶ್ ಪೂಜಾರಿ ಸೇರಿದಂತೆ ಹೆಬ್ರಿ ತಾಲ್ಲೂಕಿನ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.