ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿ, ಆಕೆಯನ್ನು ಗಮನಿಸುತ್ತಿದ್ದ ಆರೋಪದ ಮೇರೆಗೆ ಬಂಟ್ವಾಳ ನಗರ ಠಾಣೆ ಪೊಲೀಸರು 47 ವರ್ಷದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದ ಬಾಲಕಿಯೊಬ್ಬಳು ಕೆಲ ದಿನಗಳಿಂದ ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭ ಮಧ್ಯವಯಸ್ಕ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹಿಂಬಾಲಿಸುತ್ತಿದ್ದ ಎಂದು ತಿಳಿಸಿದ್ದಾಳೆ.
ಆ.19ರಂದು ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ ಅದೇ ವ್ಯಕ್ತಿ ಅಲ್ಲಿಯೂ ತನ್ನನ್ನು ಗಮನಿಸುತ್ತಿರುವುದನ್ನು ಕಂಡಿದ್ದಾಳೆ. ಇದರಿಂದ ಆತಂಕಗೊಂಡ ಬಾಲಕಿ ತನ್ನ ತಾಯಿಯ ಕೆಲಸದ ಸ್ಥಳಕ್ಕೆ ತೆರಳಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ.
ಬಳಿಕ ಬಾಲಕಿಯ ತಾಯಿ ಕಚೇರಿ ಮಾಲೀಕರೊಂದಿಗೆ ಬಸ್ ನಿಲ್ದಾಣದ ಬಳಿ ತೆರಳಿ ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಅಲ್ಲಿದ್ದ ಎನ್ನಲಾಗಿದೆ. ಈ ವೇಳೆ ವಿಚಾರಣೆ ನಡೆಸಿದಾಗ ಆತ ತನ್ನ ಹೆಸರು ಜಯಂತ್ ಎಂದು ತಿಳಿಸಿ ಅಲ್ಲಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 116/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 78 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಜಯಂತ್ (47) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.

