ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಶೂಟರ್‌ಗಳನ್ನು ಕಳುಹಿಸಿದ್ದ ಗ್ಯಾಂಗ್‌ಸ್ಟರ್ ಬಂಧನ

0
163

ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆ.7ರಂದು ಮಧ್ಯಾಹ್ನ ಸುಮಾರು 3.45ರ ವೇಳೆಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ ಅವರ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜಾ ಮೃತಪಟ್ಟಿದ್ದರು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದರು.

ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜ ನಾಯಕ್, ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಹಾಗೂ ಸಿಬ್ಬಂದಿಯ ವಿಶೇಷ ತಂಡ ಸೋಮವಾರ ಬೆಳಗ್ಗೆ 6ರಿಂದ 6.30ರ ನಡುವೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಡೇವಿಡ್ ಡಿಸೋಜಾ ಹತ್ಯೆಗೆ ಮೂವರು ಶೂಟರ್‌ಗಳನ್ನು ಕಳುಹಿಸಿದ್ದಾನೆ ಎನ್ನಲಾದ ಅನುಜ್ ಪಾಟೀಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮೇಲೆಯೇ ಗುಂಡಿನ ದಾಳಿ

ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ಸಂದರ್ಭದಲ್ಲಿ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಕೊಲ್ಲೂರು ಠಾಣೆಯ ಪಿಎಸ್‌ಐ ವಿನಯ್ ಅವರ ಬಳಿಯಿದ್ದ ಆಯುಧವನ್ನು ಕಸಿದುಕೊಂಡು ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಅನುಜ್ ಪಾಟೀಲ್‌ನನ್ನು ಪೊಲೀಸರು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

2017ರಿಂದ ಪೊಲೀಸರಿಗೆ ಚಳ್ಳೆಹಣ್ಣು

ಅನುಜ್ ಪಾಟೀಲ್ ಮುಂಬೈನಲ್ಲಿ ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದ್ದು, 2017ರಿಂದ ಪೊಲೀಸರಿಗೆ ಬೇಕಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದಲ್ಲಿ ಆತನ ವಿರುದ್ಧ MCOCA ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಪ್ರಕಟಣೆಯ ಪ್ರಕಾರ, ಅನುಜ್ ಪಾಟೀಲ್ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 10 ಪ್ರಕರಣಗಳು Arms Act ಅಡಿಯಲ್ಲಿ ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಹತ್ಯೆಯ ಹಿಂದಿನ ಜಾಲದ ತನಿಖೆ

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಶೂಟರ್‌ಗಳನ್ನು ಕಳುಹಿಸಲು ಅನುಜ್ ಪಾಟೀಲ್‌ಗೆ ನೆರವಾದವರು ಯಾರು, ಹತ್ಯೆಯ ಹಿಂದಿನ ಉದ್ದೇಶವೇನು ಹಾಗೂ ಪ್ರಕರಣದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.