ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ: ಆರೋಪಿ ಬಂಧನ

0
48

ಚಿಕ್ಕಮಗಳೂರು : ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಟಿಪ್ಪು ಸುಲ್ತಾನ್ ಕಟೌಟ್‌ ಹಿನ್ನೆಲೆಯಲ್ಲೇ ಪಾಕಿಸ್ತಾನ ಪರ ಹಾಡು ಬಳಸಿ ವಿಡಿಯೋ ಸಿದ್ಧಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಟಿಪ್ಪು ನಗರದ ನಿವಾಸಿ 23 ವರ್ಷದ ಅಫ್ರಿದ್ ಬಂಧಿತ ಆರೋಪಿಯಾಗಿದ್ದಾನೆ.

ಅಫ್ರಿದ್ ಖಾಸಗಿ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ನಿರ್ವಹಿಸುತ್ತಿದ್ದ. ಇದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್‌ನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇಬ್ಬರಿಗೂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿಡಿಯೋ ಸೃಷ್ಟಿಸಿದವರಷ್ಟೇ ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡವರು, ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಂ ಸ್ಟೇಟಸ್‌ನಲ್ಲಿ ಪ್ರಕಟಿಸಿದವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ವಿಡಿಯೋವನ್ನು ಮೊದಲಿಗೆ ಯಾರು ಸಿದ್ಧಪಡಿಸಿದರು, ಯಾವ ಖಾತೆಯಿಂದ ಅಪ್‌ಲೋಡ್ ಮಾಡಲಾಯಿತು ಹಾಗೂ ಬಳಿಕ ಅದು ಹೇಗೆ ವ್ಯಾಪಕವಾಗಿ ಹರಡಿತು ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಾಮಾಜಿಕ ಜಾಲತಾಣದ ಖಾತೆಗಳ ಚಟುವಟಿಕೆಗಳ ಮೇಲೂ ನಿಗಾ ವಹಿಸಲಾಗಿದೆ.

40 ಅಡಿ ಟಿಪ್ಪು ಕಟೌಟ್ ಹಿನ್ನೆಲೆ

ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಇತ್ತೀಚೆಗೆ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿತ್ತು. ಈ ಕಟೌಟ್‌ನ್ನು ಹಿನ್ನೆಲೆಯಾಗಿ ಬಳಸಿಕೊಂಡು ಪಾಕಿಸ್ತಾನ ಪರ ಹಾಗೂ ದೇಶವಿರೋಧಿ ಧಾಟಿಯ ಹಾಡು ಅಳವಡಿಸಿ ವಿಡಿಯೋವೊಂದನ್ನು ಎಡಿಟ್ ಮಾಡಲಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ಇದೀಗ ಪ್ರಮುಖ ಆರೋಪಿಯ ಬಂಧನವಾಗಿದ್ದು, ಪ್ರಕರಣದಲ್ಲಿ ಇನ್ನಷ್ಟು ಮಂದಿಯ ಪಾತ್ರವಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಘಟನೆ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳಿಗೆ ಅವಕಾಶ ಸಿಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಶಾಂತಿ ಕದಡುವ ಪ್ರಯತ್ನಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಇನ್ನೊಂದೆಡೆ, ಪ್ರಕರಣದ ತನಿಖೆ ಕಾನೂನು ಪ್ರಕಾರ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಥವಾ ವಿವಾದಾತ್ಮಕ ವಿಷಯಗಳನ್ನು ಹರಿಬಿಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಪೊಲೀಸರು ನೀಡಿದ್ದಾರೆ.

ಸದ್ಯ ಚಿಕ್ಕಮಗಳೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ.