ಆನ್‌ಲೈನ್ ತರಕಾರಿಗಳಲ್ಲಿ ರಾಸಾಯನಿಕ ಬಳಕೆ ದೂರು; ಕ್ರಮಕ್ಕೆ ಯು.ಟಿ ಖಾದರ್ ಸೂಚನೆ

0
29

ಬೆಂಗಳೂರು : ಆನ್‌ಲೈನ್‌ನಲ್ಲಿ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣುವಂತೆ ಮಾಡಲು ಅಪಾಯಕಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ, ಆರೋಪದಲ್ಲಿ ಸತ್ಯಾಂಶ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಆನ್‌ಲೈನ್‌ ಮೂಲಕ ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳ ಮಾರಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳ ಗುಣಮಟ್ಟ ಮತ್ತು ಸುರಕ್ಷತೆಯ ಮೇಲೂ ನಿಗಾ ವಹಿಸಲಾಗುವುದು. ಗ್ರಾಹಕರ ಆರೋಗ್ಯಕ್ಕೆ ಹಾನಿಯಾಗುವಂತಹ ಯಾವುದೇ ರಾಸಾಯನಿಕ ಬಳಕೆ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ವಿಶೇಷ ಸಭೆ ನಡೆಸಲಾಗುವುದು. ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ಪೂರೈಕೆಯಲ್ಲಿ ನಿಗದಿತ ಸುರಕ್ಷತಾ ಮಾನದಂಡಗಳನ್ನು ಪಾಲಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು ಎಂದು ಖಾದರ್ ತಿಳಿಸಿದ್ದಾರೆ.

ಔಷಧ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ರೂವಾರಿಯನ್ನು ಬಂಧಿಸಲಾಗಿದ್ದು, ಕಳಪೆ ಔಷಧಗಳು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಳಪೆ ಔಷಧಗಳ ಪೂರೈಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ, ದತ್ತೂರ ಬೀಜಗಳನ್ನು ಮಾರಾಟ ಮಾಡುತ್ತಿದ್ದ ಮೂರು ಇ-ಕಾಮರ್ಸ್‌ ವೇದಿಕೆಗಳ ಆಹಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಕಾರ್ಯಾಚರಣೆ ವೇಳೆ 2,100 ದತ್ತೂರ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದರು.

ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡಬಹುದಾದ ವಸ್ತುಗಳ ಅಕ್ರಮ ಮಾರಾಟ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಗ್ರಾಹಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ದೊರೆಯುವಂತೆ ಪರಿಶೀಲನಾ ಕಾರ್ಯಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.