ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸರ್ಕಾರದ ಮಹತ್ವದ ಹೆಜ್ಜೆ : ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರಾಗಿ ಯು.ಟಿ.ಖಾದರ್‌ ನೇಮಕ

0
98

ಬೆಂಗಳೂರು : ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ಸುಧಾರಣೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಶಿಫಾರಸುಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸದಸ್ಯರಾಗಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಪ್ರಮುಖ ಸವಾಲುಗಳನ್ನು ಸಮಿತಿ ಸಮಗ್ರವಾಗಿ ಪರಿಶೀಲಿಸಲಿದೆ. ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳಿಗೆ ಕಡಿವಾಣ ಹಾಕುವುದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಿಸುವುದು ಹಾಗೂ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಶಿಫಾರಸುಗಳನ್ನು ಮಾಡಲಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ವಿದ್ಯಾರ್ಥಿಗಳು ಮತ್ತು ಕುಟುಂಬಗಳ ಮೇಲಿನ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಅಧ್ಯಯನ ನಡೆಸಲಿದೆ.

ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುವುದು. ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಬಗ್ಗೆಯೂ ಶಿಫಾರಸು ರೂಪಿಸಲಾಗುತ್ತದೆ.

ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸುವುದು, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದು, ಅಪ್ರೆಂಟಿಸ್‌ಶಿಪ್ ಮತ್ತು ಇಂಟರ್ನ್‌ಶಿಪ್ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳ ನಡುವಿನ ಸಹಭಾಗಿತ್ವವನ್ನು ಬಲಪಡಿಸುವ ಬಗ್ಗೆಯೂ ಸಮಿತಿ ಗಮನ ಹರಿಸಲಿದೆ.

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಗೂ ವಿಶೇಷ ಆದ್ಯತೆ ನೀಡಲಾಗಿದ್ದು, ಸಮಾಲೋಚನೆ ಹಾಗೂ ಬೆಂಬಲ ವ್ಯವಸ್ಥೆ ಬಲಪಡಿಸುವುದು, ಪರೀಕ್ಷೆ ಮತ್ತು ಶೈಕ್ಷಣಿಕ ಒತ್ತಡ ನಿರ್ವಹಣೆ ಹಾಗೂ ಆತ್ಮಹತ್ಯೆ ತಡೆಗೆ ಅಗತ್ಯ ಕ್ರಮಗಳ ಕುರಿತು ಶಿಫಾರಸುಗಳನ್ನು ಸಲ್ಲಿಸಲಿದೆ.

ವಿದ್ಯಾರ್ಥಿವೇತನ ಮತ್ತು ಆರ್ಥಿಕ ನೆರವು ಹೆಚ್ಚಿಸುವುದು, ಹಾಸ್ಟೆಲ್‌ಗಳ ಸಾಮರ್ಥ್ಯ ವಿಸ್ತರಣೆ, ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ ನೀಡುವುದು ಹಾಗೂ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮೊದಲ ತಲೆಮಾರಿನ ಕಲಿಕಾರ್ಥಿಗಳಿಗೆ ಸೂಕ್ತ ಶೈಕ್ಷಣಿಕ ಬೆಂಬಲ ಒದಗಿಸುವ ವಿಚಾರಗಳನ್ನೂ ಸಮಿತಿ ಪರಿಶೀಲಿಸಲಿದೆ.

ಇದರ ಭಾಗವಾಗಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ರಾಜ್ಯಾದ್ಯಂತ ಸಮಾಲೋಚನೆ ನಡೆಸಲಾಗುತ್ತದೆ. ಈ ಸಮಾಲೋಚನೆಗಳ ಮೂಲಕ ನೆಲಮಟ್ಟದ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಕಾರ್ಯಗತಗೊಳಿಸಬಹುದಾದ ಪರಿಹಾರಗಳನ್ನು ರೂಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಉಪಸಮಿತಿಯು ಒಂದು ತಿಂಗಳೊಳಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ಶಿಕ್ಷಣ, ಪರೀಕ್ಷಾ ವ್ಯವಸ್ಥೆ, ಕೌಶಲ್ಯಾಭಿವೃದ್ಧಿ, ಮಾನಸಿಕ ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರ ನೆರವು ಪಡೆಯಲು ಸಮಿತಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಸಚಿವ ಸಂಪುಟ ಉಪಸಮಿತಿಗೆ ಉನ್ನತ ಶಿಕ್ಷಣ ಇಲಾಖೆಯನ್ನು ನೋಡಲ್ ಇಲಾಖೆಯಾಗಿ ನೇಮಿಸಲಾಗಿದೆ. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗುವ ನಿರೀಕ್ಷೆಯಿದೆ.