ಪುತ್ತೂರಿನಲ್ಲಿ ಕಾರು ಕಳವು ಪ್ರಕರಣ : ಕೇರಳ–ತಮಿಳುನಾಡಿನ ನಾಲ್ವರ ಬಂಧನ

0
39

ಪುತ್ತೂರು : ಪುತ್ತೂರಿನಿಂದ ಓಮ್ಮಿ ಕಾರು ಕಳವು ಮಾಡಿ ಕೇರಳದ ಮೂಲಕ ತಮಿಳುನಾಡಿಗೆ ಸಾಗಿಸಿ ಮಾರಾಟ ಮಾಡಿದ್ದ ಕೇರಳ ಹಾಗೂ ತಮಿಳುನಾಡು ಮೂಲದ ನಾಲ್ವರು ಅಂತಾರಾಜ್ಯ ಕಳವು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ. (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ. (24) ಎಂದು ಗುರುತಿಸಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡೂರು ಕಾವು ಎಂಬಲ್ಲಿ ಕಳೆದ ಜೂನ್ 19 ಮತ್ತು 20ರ ಮಧ್ಯರಾತ್ರಿ ಓಮ್ಮಿ ಕಾರೊಂದು ಕಳವಾಗಿತ್ತು. ಈ ಕುರಿತು ವಾಹನ ಮಾಲೀಕರು ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗಾಗಿ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿದ್ದರು. ಪುತ್ತೂರು ಡಿವೈಎಸ್‌ಪಿ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯಕ್ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐಗಳಾದ ಗುಣಪಾಲ ಜೆ. ಮತ್ತು ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದ ತನಿಖಾ ತಂಡ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಗಳಿಂದ ಸುಮಾರು ₹2.5 ಲಕ್ಷ ಮೌಲ್ಯದ ಕಳವು ಮಾಡಲಾಗಿದ್ದ ಓಮ್ಮಿ ಕಾರು ಹಾಗೂ ಕಳ್ಳತನಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಕೆಟಿಎಂ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಪುತ್ತೂರಿನಿಂದ ಓಮ್ಮಿ ಕಾರನ್ನು ಕಳವು ಮಾಡಿ ಮೊದಲು ಕೇರಳಕ್ಕೆ ಕೊಂಡೊಯ್ದಿದ್ದರು. ಬಳಿಕ ಅಲ್ಲಿಂದ ತಮಿಳುನಾಡಿಗೆ ಸಾಗಿಸಿ ಕಾರನ್ನು ಮಾರಾಟ ಮಾಡಿದ್ದರು. ತಮಿಳುನಾಡಿನಲ್ಲಿ ಈ ಕಾರನ್ನು ಆಂಬ್ಯುಲೆನ್ಸ್ ಆಗಿ ಪರಿವರ್ತಿಸಲಾಗಿತ್ತು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಆರೋಪಿಗಳು ಅಂತಾರಾಜ್ಯ ಮಟ್ಟದಲ್ಲಿ ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಬಂಧಿತರ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಮತ್ತು ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಕಳ್ಳತನ ಪ್ರಕರಣಗಳು ದಾಖಲಾಗಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಳವು ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.