ಕಾರ್ಕಳ : ನಗರದ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಹಿಳಾ ಸದಸ್ಯರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಭಕ್ತಿಭಾವ ಹಾಗೂ ಶ್ರದ್ಧೆಯಿಂದ ವಿಜೃಂಭಣೆಯಿಂದ ನಡೆಯಿತು.
ಆಗಸ್ಟ್ 28ರಂದು ಶುಕ್ರವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರು ಸಾಮೂಹಿಕವಾಗಿ ವರಮಹಾಲಕ್ಷ್ಮೀ ವ್ರತವನ್ನು ಆಚರಿಸಿದರು. ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ನೆರವೇರಿದ ಬಳಿಕ ಮಹಾಪೂಜೆ ಹಾಗೂ ಮಂಗಳಾರತಿ ನಡೆಯಿತು.
ವ್ರತಾಚರಣೆಯ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕರಿಸಲಾಗಿದ್ದ ಶ್ರೀ ವರಮಹಾಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ಮಹಿಳಾ ಭಕ್ತರು ಪೂಜೆ ಸಲ್ಲಿಸಿ, ಕುಟುಂಬದ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಕಾರ್ಯಕ್ರಮದ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತರು ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಕ್ಕೆ ಸಹಕರಿಸಿದರು.

