8 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಕೊನೆಗೂ ಬಂಧನ

0
37

ಮಂಗಳೂರು : ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮುಕ್ಕಚೇರಿ ಸಮೀಪದ ಹಿಲರಿನಗರ ನಿವಾಸಿ ಮುವಾಝ್ (45) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಕರಣ ದಾಖಲಾದ ಬಳಿಕ ಮುವಾಝ್ ಕೇರಳದ ಇರಿಕ್ಕೂರು ಪ್ರದೇಶದಲ್ಲಿ ವಾಸವಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಮುವಾಝ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದರೂ ಆತ ಗೈರುಹಾಜರಾಗಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಜಾರಿಗೊಳಿಸಿತ್ತು.

ನ್ಯಾಯಾಲಯದ ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಪೂರ್ವ ಠಾಣೆ ಪೊಲೀಸರು ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಕಲೆಹಾಕಿ, ಕೇರಳದ ಇರಿಕ್ಕೂರು ಪ್ರದೇಶದಿಂದ ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಮುವಾಝ್‌ನನ್ನು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಎಂಟು ವರ್ಷಗಳಿಂದ ಪೊಲೀಸರಿಗೆ ಹಾಗೂ ನ್ಯಾಯಾಲಯದ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಮಂಗಳೂರು ಪೂರ್ವ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.