ಬೆಳ್ತಂಗಡಿ : ಪಣಕಜೆ ಮಸೀದಿ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ರಿನ್ಸ್ ಶಿಬಿ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಟೆಂಪೋವೊಂದಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ರಿನ್ಸ್ ಶಿಬಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರಿನ್ಸ್ ಶಿಬಿ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

