ಲಾರಿಗೆ ಕಾರು ಡಿಕ್ಕಿ : 8 ವಿದ್ಯಾರ್ಥಿಗಳು ಮೃತ

0
63

ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ದಿಂಡಿಗಲ್ ಮೂಲದ ಎಂಜಿನಿಯರಿಂಗ್ ಕಾಲೇಜಿನ ಎಂಟು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಕೇರಳದಲ್ಲಿ ಸಂಭವಿಸಿದೆ.

ಪೊಲೀಸರ ಪ್ರಕಾರ, ವಿದ್ಯಾರ್ಥಿಗಳು ಗುರುವಾಯೂರಿನಿಂದ ಕೊಡುಂಗಲ್ಲೂರಿನತ್ತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಾತ್ರಿ ಸುಮಾರು 11.40ರ ವೇಳೆಗೆ ಕೈಪಮಂಗಲಂನ ಪಣಂಬಿಕ್ಕುನ್ನು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತಕ್ಕೀಡಾದ ಕಾರು ತಮಿಳುನಾಡಿನ ನೋಂದಣಿ ಸಂಖ್ಯೆಯನ್ನು ಹೊಂದಿದ್ದರೆ, ಲಾರಿಗೆ ಮಹಾರಾಷ್ಟ್ರದ ನೋಂದಣಿ ಸಂಖ್ಯೆ ಇತ್ತು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಆರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮೃತರ ಪೈಕಿ ಆರು ಮಂದಿಯ ಗುರುತು ಪತ್ತೆಯಾಗಿದ್ದು, ಸೂರ್ಯ, ಯುವಸಂಜಿತ್, ವಿಶ್ವ ಹಾಗೂ ಜೊಹುವಾ ದಿಂಡಿಗಲ್ ನಿವಾಸಿಗಳಾಗಿದ್ದಾರೆ. ಸಂತೋಷ್ ಮತ್ತು ಪ್ರಸನ್ನ ಮೂಲತಃ ಮುಂಬೈ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನಿಬ್ಬರು ಮೃತ ವಿದ್ಯಾರ್ಥಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆದು ತ್ರಿಶೂರ್ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ರವಾನಿಸಲಾಗಿದೆ.

ಲಾರಿ ಚಾಲಕ ನಾಪತ್ತೆ

ಅಪಘಾತಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಲಾರಿಯನ್ನು ಸಂಚಾರ ನಿಯಮಗಳಿಗೆ ವಿರುದ್ಧವಾಗಿ ರಸ್ತೆಯ ಬಲಭಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ, ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಸಂಚಾರ ಮಾರ್ಗ ಬದಲಾಯಿಸಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅತಿವೇಗದಲ್ಲಿತ್ತು ಎನ್ನಲಾಗಿದ್ದು, ಬ್ಯಾರಿಕೇಡ್‌ ಅನ್ನು ಗಮನಿಸದೆ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಲಾರಿ ಚಾಲಕನ ನಿರ್ಲಕ್ಷ್ಯದ ಜೊತೆಗೆ ಕಾರಿನ ಅತಿವೇಗವೂ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ವಿದ್ಯಾರ್ಥಿಗಳ ಕುಟುಂಬಸ್ಥರು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.