ಮಂಗಳೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತೆಯನ್ನು ಆಕಾಶ ಭವನದ ಆನಂದ ನಗರ ನಿವಾಸಿ ಲತಾ ಮಾರಿಯಾ (44) ಎಂದು ಗುರುತಿಸಲಾಗಿದೆ.
ಐದು ವರ್ಷಗಳ ಹಿಂದೆ ಲತಾ ಮಾರಿಯಾ ಅವರು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳವು ನಡೆಸಿದ ಆರೋಪಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರ ಕೈಗೆ ಸಿಗದೆ ಹಾಗೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.
ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯವು ಲತಾ ಮಾರಿಯಾ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.
ವಾರಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸರು ಜ್ಯೋತಿನಗರದಲ್ಲಿ ಲತಾ ಮಾರಿಯಾ ಅವರನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

