ಕೀಳಂಜೆ : ಕೀಳಂಜೆ ಶ್ರೀ ಶಾರದಾ ಜುವೆಲರ್ಸ್ ಸಮೀಪ ಅಪಾಯಕಾರಿಯಾಗಿ ಒಣಗಿ ನಿಂತಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸುವ ಮೂಲಕ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.
ಈ ಪ್ರದೇಶದಲ್ಲಿ ಅಪಾಯಕಾರಿಯಾಗಿ ಒಣಗಿದ್ದ ಮರದ ಕುರಿತು ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜ ಸೇವಕ ಸತೀಶ್ ಪೂಜಾರಿ ಕೀಳಂಜೆ ಅವರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು. ಮನವಿಗೆ ಸ್ಪಂದಿಸಿದ ಬ್ರಹ್ಮಾವರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಅಪಾಯಕಾರಿಯಾಗಿದ್ದ ಒಣಗಿದ ಮರವನ್ನು ತೆರವುಗೊಳಿಸಿದ್ದಾರೆ.

ಮರವು ರಸ್ತೆಯ ಸಮೀಪದಲ್ಲೇ ಇದ್ದ ಕಾರಣ, ಯಾವುದೇ ಸಂದರ್ಭದಲ್ಲಿ ನೆಲಕ್ಕುರುಳಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅಪಾಯ ಉಂಟಾಗುವ ಸಾಧ್ಯತೆ ಇತ್ತು. ಅದರಲ್ಲೂ ಮಕ್ಕಳು ಈ ಪ್ರದೇಶದಲ್ಲಿ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಮರ ತೆರವುಗೊಳಿಸಿರುವುದು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ಕ್ರಮವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಾಯಕಾರಿ ಮರವನ್ನು ತೆರವುಗೊಳಿಸಲು ತ್ವರಿತವಾಗಿ ಕ್ರಮ ಕೈಗೊಂಡ ಬ್ರಹ್ಮಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಾರ್ವಜನಿಕರು ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ಈ ವಿಚಾರವನ್ನು ಇಲಾಖೆಯ ಗಮನಕ್ಕೆ ತಂದು ಮರ ತೆರವುಗೊಳಿಸುವಂತೆ ಸತತ ಪ್ರಯತ್ನ ನಡೆಸಿದ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜಿ ಅವರ ಕಾರ್ಯಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆ.ಜಿ. ರಸ್ತೆ–ಪೆರಡೂರು ಮಾರ್ಗದಲ್ಲೂ ಅಪಾಯಕಾರಿ ಮರಗಳು
ಇದೇ ವೇಳೆ ಕೆ.ಜಿ. ರಸ್ತೆ–ಪೆರಡೂರು ರಸ್ತೆಯ ಎರಡೂ ಬದಿಗಳಲ್ಲೂ ಹಲವು ಒಣಗಿದ ಹಾಗೂ ಅಪಾಯಕಾರಿಯಾಗಿ ನಿಂತಿರುವ ಮರಗಳಿವೆ ಎಂದು ಸಾರ್ವಜನಿಕರು ಗಮನ ಸೆಳೆದಿದ್ದಾರೆ. ಈ ಮರಗಳು ರಸ್ತೆಗೆ ಹಾಗೂ ವಾಹನ ಸವಾರರಿಗೆ ಅಪಾಯ ಉಂಟುಮಾಡುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಾರ್ವಜನಿಕರು ಹಾಗೂ ವಾಹನ ಸವಾರರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರು ಮನವಿ ಮಾಡಿದ್ದಾರೆ.

