ನಕಲಿ ಆಧಾರ್ ಬಳಸಿ ನ್ಯಾಯಾಲಯಕ್ಕೆ ವಂಚನೆ ಯತ್ನ : ಇಬ್ಬರ ಬಂಧನ

0
66

ಉಡುಪಿ: ಆರೋಪಿಯೊಬ್ಬನಿಗೆ ಜಾಮೀನು ಕೊಡಿಸುವ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿ ವಂಚಿಸಲು ಯತ್ನಿಸಿದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳದ ಉಮ್ಮರ್ ಫಾರೂಕ್ (32) ಮತ್ತು ಮಂಗಳೂರಿನ ನಿಶಾಂತ್ ಕುಮಾರ್ (24) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಪ್ರಕರಣ?

ನೋಮಾನ್ ಎಂಬ ಆರೋಪಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಸಲುವಾಗಿ ಉಮ್ಮರ್ ಫಾರೂಕ್ ಎಂಬಾತ ಮತ್ತೊಬ್ಬ ವ್ಯಕ್ತಿಯ ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು, ಅದಕ್ಕೆ ಕೆ.ಟಿ. ಮೊಹಮ್ಮದ್ ಎಂಬವರ ಹೆಸರು ಹಾಗೂ ವಿಳಾಸವನ್ನು ನಮೂದಿಸಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾನೆ ಎನ್ನಲಾಗಿದೆ. ಬಳಿಕ ತಾನು ಬೇರೆ ವ್ಯಕ್ತಿಯೆಂದು ಬಿಂಬಿಸಿಕೊಂಡು ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿ ಜಾಮೀನು ಪ್ರಕ್ರಿಯೆಯಲ್ಲಿ ಭಾಗಿಯಾಗಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಕಲಿ ಆಧಾರ್ ಕಾರ್ಡ್ ಅನ್ನು ಮಂಗಳೂರಿನ ನಿಶಾಂತ್ ಕುಮಾರ್ ಕಂಪ್ಯೂಟರ್ ಮೂಲಕ ಸೃಷ್ಟಿಸಿಕೊಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮೂಲಕ ನ್ಯಾಯಾಲಯಕ್ಕೆ ವಂಚನೆ ಮಾಡಲು ಯತ್ನಿಸುವುದರ ಜತೆಗೆ, ನೈಜ ಆಧಾರ್ ಕಾರ್ಡ್ ಹೊಂದಿದ್ದ ವ್ಯಕ್ತಿಯ ಗುರುತನ್ನೂ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ರತ್ನಾಕರ ಕೆ. ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ತಂಡವು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿ, ಗುರುತು ದುರುಪಯೋಗ ಹಾಗೂ ನ್ಯಾಯಾಲಯಕ್ಕೆ ವಂಚನೆ ಯತ್ನ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.