ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಪ್ರಧಾನಿಯವರ ಹುಟ್ಟುಹಬ್ಬ ಆಚರಣೆ

0
17

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಶಾಲೆಯ ಮಕ್ಕಳೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ನ್ಯಾಯವಾದಿ ಹಾಗೂ ಎಂ.ಸಿ.ಎಸ್. ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ವಿವಿಧ ಯೋಜನೆಗಳ ಕುರಿತು ವಿವರಿಸಿದರು. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ದೇಶದ ಅಭಿವೃದ್ಧಿಗಾಗಿ ಹಲವು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ಚಾವಡಿಮನೆ ಡಾ. ಜಗನ್ನಾಥ ಶೆಟ್ಟಿ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದರೆ, ನರೇಂದ್ರ ಮೋದಿ ಅವರು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ಪರಿಚಯಿಸುತ್ತಿದ್ದಾರೆ ಎಂದರು.

ಭಿನ್ನ ಸಾಮರ್ಥ್ಯದ ಮಕ್ಕಳಿಗೆ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸವಾಲಿನ ಕೆಲಸವಾಗಿದ್ದು, ಸ್ಪೂರ್ತಿ ಸಂಸ್ಥೆಯ ಅಧ್ಯಕ್ಷರು ಹಾಗೂ ಶಿಕ್ಷಕರು ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದೆ. ಇಂತಹ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಎಲ್ಲರೂ ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ, ಬೆಳುವಾಯಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಖಂಡಿಗ ಹಾಗೂ ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬೆಳುವಾಯಿ ಭಾಸ್ಕರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ. ಶೆಟ್ಟಿಗಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸುಚಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.