ಪೊಲೀಸ್ ಠಾಣೆ ಮುಂಭಾಗ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

0
13

ಫಾಸ್ಟ್‌ಫುಡ್ ಹೋಟೆಲ್ ಬಳಿ ನಿಲ್ಲಿಸಲಾಗಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ಕೋರಮಂಗಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದಿದೆ.

ರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಪೊಲೀಸ್ ಠಾಣೆಯ ಮುಂಭಾಗದ ಫಾಸ್ಟ್‌ಫುಡ್ ಹೋಟೆಲ್ ಬಳಿ ಕಾರನ್ನು ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಬೆಳಗ್ಗೆ ಕಾರಿನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಗಮನಕ್ಕೆ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸ್ಥಳಕ್ಕೆ ಆಗಮಿಸಿದ ಕೋರಮಂಗಲ ಪೊಲೀಸರು ಕಾರನ್ನು ಪರಿಶೀಲಿಸಿದಾಗ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಅಕ್ಬರ್ ಎಂದು ಗುರುತಿಸಲಾಗಿದೆ.

ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಸೋಕೋ ತಂಡ ಹಾಗೂ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಅಕ್ಬರ್ ಅವರ ಹಿನ್ನೆಲೆ, ಅವರು ಕಾರಿನಲ್ಲಿ ಹೇಗೆ ಬಂದರು ಹಾಗೂ ಸಾವಿಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಸಾಧ್ಯತೆಯಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ. ಘಟನೆ ಕುರಿತು ಕೋರಮಂಗಲ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.