ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

0
9

ಬಂಟ್ವಾಳ : ಕನ್ನಡ ಭಾಷೆಯ ಬಳಕೆ ಇಂದಿನ ದಿನಗಳಲ್ಲಿ ಕಡಿಮೆಯಾಗುತ್ತಿದ್ದು, ಇದು ಕೇವಲ ಭಾಷೆಯ ಕಡೆಗಣನೆಯಲ್ಲ; ಭಾಷೆಯೊಂದಿಗೆ ಬೆಸೆದುಕೊಂಡಿರುವ ಸಂಸ್ಕೃತಿಯೂ ಕಣ್ಮರೆಯಾಗುತ್ತಿರುವುದನ್ನು ಸೂಚಿಸುತ್ತದೆ. ಹಲವು ಭಾಷೆಗಳು ಜೀವನಕ್ಕೆ ಅಗತ್ಯವಾಗಿದ್ದರೂ, ಮಾತೃಭಾಷೆಯಲ್ಲಿಯೇ ವ್ಯವಹರಿಸುವುದು ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ಶ್ರೀ ವೆಂಕಟರಮಣಸ್ವಾಮಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಡಿ. ಮಂಚಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ಹಾಗೂ ಶ್ರೀ ವೆಂಕಟರಮಣಸ್ವಾಮಿ ಕಾಲೇಜು, ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಕುರಿತು ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹೇಳಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ತುಂಬೆ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ವಿ.ಸು. ಭಟ್ ಅವರು ‘ಯಕ್ಷಗಾನ–ಜೀವನದಲ್ಲಿ ಶಿಸ್ತು–ಧರ್ಮಾಚರಣೆ’ ವಿಷಯದ ಕುರಿತು ದತ್ತಿ ಉಪನ್ಯಾಸ ನೀಡಿದರು. ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಶೇಷ ಸಂಪನ್ಮೂಲ ವ್ಯಕ್ತಿ ಸುರೇಖಾ ಯಾಳವಾರ ಅವರು ‘ಸಾಹಿತ್ಯ ಮತ್ತು ಮಹಿಳೆ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥ ಕೆ. ಶಿವಣ್ಣ ಪ್ರಭು ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಯೋಗವರ್ಧನ ಡಿ.ಎಂ. ವಂದಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಕಾಶೀನಾಥ ಶಾಸ್ತ್ರಿ ಹೆಚ್.ವಿ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನಿ ಯಕ್ಷಿತಾ ಹಾಗೂ ತಂಡದವರು ನಾಡಗೀತೆ ಹಾಡಿದರು.