ಮಂಗಳೂರು :́ ನಗರದ ಪಡೀಲ್ ಟೊಯೋಟಾ ಕಾರು ಶೋರೂಮ್ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು, ಲಾರಿಯಲ್ಲಿದ್ದ 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಾದಿಕ್ ಜಿ. (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಅವರು ಸಿಬ್ಬಂದಿ ಸಿದ್ದರಾಮ ಅವರೊಂದಿಗೆ ಮಂಗಳವಾರ ಬೆಳಗಿನ ಜಾವ ಗಸ್ತು ಕರ್ತವ್ಯದಲ್ಲಿದ್ದ ವೇಳೆ, ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ದೊರೆತಿತ್ತು. ಮಾಹಿತಿ ಆಧರಿಸಿ ಪೊಲೀಸರು ವಾಹನದ ಚಲನವಲನದ ಮೇಲೆ ನಿಗಾ ಇರಿಸಿದ್ದರು.
ಸುಮಾರು ಬೆಳಗ್ಗೆ 6.30ರ ವೇಳೆಗೆ ಆಡ್ಯಾರು ಕಡೆಯಿಂದ ಮಂಗಳೂರು ನಗರದತ್ತ ಬರುತ್ತಿದ್ದ ಲಾರಿಯನ್ನು ಪೊಲೀಸರು ಬೆನ್ನಟ್ಟಿ, ಪಡೀಲ್ ಟೊಯೋಟಾ ಕಾರು ಶೋರೂಮ್ ಎದುರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಲಾರಿಯಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದು, ಚಾಲಕ ಸಾದಿಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಾರಿಯನ್ನು ಟಾರ್ಪಲ್‌ನಿಂದ ಮುಚ್ಚಲಾಗಿದ್ದು, ಒಳಗೆ ಒಟ್ಟು 17 ಜಾನುವಾರುಗಳು ಪತ್ತೆಯಾಗಿವೆ. ಅವುಗಳನ್ನು ಸೂಕ್ತ ವ್ಯವಸ್ಥೆಯಿಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(ಎ), 11(ಡಿ), ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ ಕಲಂ 6, ಬಿಎನ್‌ಎಸ್ ಕಲಂ 3(5) ಅಡಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು 17 ಜಾನುವಾರುಗಳು, ಸಾಗಾಟಕ್ಕೆ ಬಳಸಿದ್ದ ಲಾರಿ ಹಾಗೂ ಆರೋಪಿ ಸಾದಿಕ್‌ನ ಮೊಬೈಲ್ ಫೋನ್ ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ಸುಬಾನ್ ಮತ್ತು ರೆಹಮಾನ್ ಎಂಬ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

