ಸೆ. 27ರಂದು ಉಜಿರೆಯಲ್ಲಿ ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಶಿಕ್ಷಕರ ದಿನಾಚರಣೆ

0
14

ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ನೇತೃತ್ವದಲ್ಲಿ ವಿವಿಧ ವಿಷಯವಾರು ಉಪನ್ಯಾಸಕರ ಸಂಘಗಳು, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘ, ರಾಜ್ಯ ಪದವಿಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆ.27ರಂದು ಭಾನುವಾರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ‘ಇಂದ್ರಪ್ರಸ್ಥ’ ಸಭಾಂಗಣದಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ (ಪದವಿಪೂರ್ವ)ಯ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್.ಹೆಚ್. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಉದ್ಘಾಟಿಸಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಶೇ.100ರಷ್ಟು ಫಲಿತಾಂಶ ದಾಖಲಿಸಿದ ಪದವಿಪೂರ್ವ ಕಾಲೇಜುಗಳ ಸಿಬ್ಬಂದಿಗೆ ಸನ್ಮಾನ ನಡೆಯಲಿದೆ. ಇದರೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಜಿಲ್ಲೆಯ ಆಯ್ದ ಉಪನ್ಯಾಸಕರಿಂದ ಸಂಗೀತ ರಸಮಂಜರಿ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿಗಾಗಿ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಉಪನ್ಯಾಸಕರ ಪೈಕಿ ಅದೃಷ್ಟಶಾಲಿಗಳಿಗೆ ಐಫೋನ್ ಸೇರಿದಂತೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಜಿಲ್ಲೆಯ ಪದವಿಪೂರ್ವ ಶಿಕ್ಷಣ ಕ್ಷೇತ್ರದ ಉಪನ್ಯಾಸಕರು ಹಾಗೂ ಸಿಬ್ಬಂದಿಯ ಸೌಹಾರ್ದ, ಪ್ರತಿಭೆ ಮತ್ತು ಸಾಧನೆಗಳನ್ನು ಸಂಭ್ರಮಿಸುವ ವಿಶೇಷ ವೇದಿಕೆಯಾಗಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ. ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.