
ಮಂಗಳೂರು : ಮಂಗಳೂರು ಆಟೋರಿಕ್ಷಾ ಚಾಲಕ ಮತ್ತು ಕಾರು ಚಾಲಕ ಸಹಕಾರಿ ಸಂಘ ನಿಯಮಿತದ ವತಿಯಿಂದ ಆಟೋ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರಿಗಾಗಿ ಉಚಿತ ರಕ್ತದೊತ್ತಡ, ಮಧುಮೇಹ ಮತ್ತು ಹಿಮೋಗ್ಲೋಬಿನ್ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸಹಕಾರಿ ಸಂಘದ ಅಧ್ಯಕ್ಷ ಐವನ್ ಡಿʼಸೋಜಾ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಎ.ಜೆ. ಆಸ್ಪತ್ರೆ ಮತ್ತು ವೈದ್ಯಕೀಯ ಮಹಾವಿದ್ಯಾಲಯದ ಡಾ. ಕವಿತಾ ಡಿʼಸೋಜಾ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ತಪಾಸಣೆಗೊಳಗಾದವರಿಗೆ ಸ್ಥಳದಲ್ಲೇ ಆರೋಗ್ಯ ವರದಿ ಕಾರ್ಡ್‌ಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿಯೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕವಿತಾ ಡಿʼಸೋಜಾ, ರಕ್ತದೊತ್ತಡ ಮತ್ತು ಮಧುಮೇಹವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ನಿಯಂತ್ರಣದಲ್ಲಿಟ್ಟುಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಹಲವು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಹೇಳಿದರು. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಜೊತೆಗೆ ಜೀವನಶೈಲಿಯಲ್ಲಿಯೂ ಅಗತ್ಯ ನಿಯಂತ್ರಣ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಘದ ಅಧ್ಯಕ್ಷ ಐವನ್ ಡಿʼಸೋಜಾ ಮಾತನಾಡಿ, ಡಾ. ಕವಿತಾ ಡಿʼಸೋಜಾ ಅವರ ನೇತೃತ್ವದಲ್ಲಿ ಇದುವರೆಗೆ ಸುಮಾರು 100ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದ್ದು, ಅನೇಕ ಉಚಿತ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಮೂಲಕ ಹಲವಾರು ಜನರ ಆರೋಗ್ಯ ರಕ್ಷಣೆಗೆ ಮಹತ್ವದ ಕೊಡುಗೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎ.ಜೆ. ಆಸ್ಪತ್ರೆ ಮತ್ತು ವೈದ್ಯಕೀಯ ಮಹಾವಿದ್ಯಾಲಯದ ವೈದ್ಯೆ ಡಾ. ಬಿಂದು ಹಾಗೂ ಕಾರ್ಯಕ್ರಮದ ಸಂಯೋಜಕ ಜಯರಾಮ್ ಅವರು ಆರೋಗ್ಯದ ಕುರಿತು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಹಕಾರಿ ಸಂಘದ ಉಪಾಧ್ಯಕ್ಷ ಸಿರಿಲ್ ಡಿಸೋಜಾ, ನಿರ್ದೇಶಕರಾದ ಭಾಸ್ಕರ್ ರಾವ್, ಬಬಿತಾ ಡಿಸೋಜಾ, ಜೇಮ್ಸ್ ಮಾಡ್ತಾ, ವಸಂತ್ ಶೆಟ್ಟಿ ಶೇಖರ್ ಹಾಗೂ ವಿದ್ಯಾ ತೋರಸ್ ಉಪಸ್ಥಿತರಿದ್ದರು.
