ಲೈಂಗಿಕ ದೌರ್ಜನ್ಯ ತಡೆಗೆ ಕಠಿಣ ಕಾರ್ಯತಂತ್ರ ರೂಪಿಸಿ: ಸುಪ್ರೀಂ ಕೋರ್ಟ್

0
101

ನವದೆಹಲಿ : ಮಹಿಳೆಯರು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಇಲಾಖೆ ಕಠಿಣ ಹಾಗೂ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಲೈಂಗಿಕ ಅಪರಾಧ ಎಸಗುವವರಲ್ಲಿ ಕಾನೂನಿನ ಬಗ್ಗೆ ಭಯ ಮೂಡುವಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಂತಹ ಅಪರಾಧಗಳಿಗೆ ಕಡಿವಾಣ ಹಾಕಲು ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ತ್ವರಿತ ಹಾಗೂ ಕಠಿಣ ಕ್ರಮ ಅಗತ್ಯ ಎಂದು ನ್ಯಾಯಾಲಯ ತಿಳಿಸಿದೆ.

ವಿದ್ಯಾರ್ಥಿನಿಯರಿಗೆ ನಿರಂತರ ಕಿರುಕುಳ ನೀಡುವವರ ವಿರುದ್ಧವೂ ವಿಶೇಷ ಗಮನ ಹರಿಸಬೇಕು. ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿದೆ.

ಅಕ್ರಮವಾಗಿ ಕಾರ್ಯನಿರ್ವಹಿಸುವ ತಿನಿಸಿನ ಅಂಗಡಿಗಳು ಹಾಗೂ ಮದ್ಯಪಾನ ಸೇರಿದಂತೆ ಸಮಾಜವಿರೋಧಿ ಚಟುವಟಿಕೆಗಳಿಗೆ ಅವಕಾಶವಾಗುವ ಸ್ಥಳಗಳ ಮೇಲೂ ನಿಗಾ ವಹಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇತ್ತೀಚೆಗೆ ನವದೆಹಲಿ ಹಾಗೂ ಸುತ್ತಮುತ್ತ ವರದಿಯಾದ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಪೊಲೀಸರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹತ್ವದ ನಿರ್ದೇಶನಗಳನ್ನು ನೀಡಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಯಲು ಆರೋಪಿಗಳ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ತೋರದೆ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.