ದಿಡುಪೆ ಜಲಪಾತಕ್ಕೆ ಪ್ರವಾಸಿಗರು ತೆರಳದಂತೆ ಅರಣ್ಯ ಇಲಾಖೆ ಸೂಚನೆ

0
58

ಬೆಳ್ತಂಗಡಿ : ದಿಡುಪೆ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಿಡುಪೆ ಜಲಪಾತಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ಕಾಡಾನೆಗಳ ಹಿಂಡು ಬೆಳಗ್ಗೆ ಹಾಗೂ ಸಂಜೆ ವೇಳೆ ದಿಡುಪೆ ಭಾಗದ ವಿವಿಧ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದು ಗಮನಕ್ಕೆ ಬಂದಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಜಲಪಾತಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

ಮುಂದಿನ ಆದೇಶದವರೆಗೆ ದಿಡುಪೆ ಜಲಪಾತಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಡಾನೆಗಳ ಸಂಚಾರವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಜಲಪಾತದತ್ತ ತೆರಳದೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ.