ಬಂಟ್ವಾಳ : ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಮತ್ತೊಂದು ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾಗಿದ್ದ ಕೆಇ ಕಾಯ್ದೆಯ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ದಾಖಲಾಗಿದ್ದ ಹಲ್ಲೆ, ಮನೆಗೆ ಅಕ್ರಮ ಪ್ರವೇಶ, ಆಸ್ತಿ ಹಾನಿ, ಬೆಂಕಿ ಹಚ್ಚುವುದು ಹಾಗೂ ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿಯೂ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸರು, ಅಕ್ಟೋಬರ್ 9ರಂದು ಮೂಡುಬಿದಿರೆ ತಾಲೂಕಿನ ಶಿರ್ತಾಡಿಯಲ್ಲಿ ಆತನನ್ನು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

