
ಬೆಂಗಳೂರು : ನಮ್ಮ ಕರ್ನಾಟಕ ಸೇನೆಯ ರಾಜ್ಯಮಟ್ಟದ ಸಭೆಯಲ್ಲಿ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರಿಗೆ ಹೆಚ್ಚುವರಿಯಾಗಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಲಾಗಿದೆ.
ಬೆಂಗಳೂರಿನ ಗಾಂಧಿನಗರದಲ್ಲಿರುವ ಸ್ಯಾಂಕ್ಟಮ್ ಹೋಟೆಲ್ನಲ್ಲಿ ಅಕ್ಟೋಬರ್ 11ರಂದು ನಡೆದ ರಾಜ್ಯಮಟ್ಟದ ಸಭೆಯು ಸಂಘಟನೆಯ ರಾಜ್ಯಾಧ್ಯಕ್ಷರಾದ ಎಂ. ಬಸವರಾಜ್ ಪಡುಕೋಟೆ ಅವರ ಜನ್ಮದಿನದ ವಿಶೇಷ ಸಂದರ್ಭದಲ್ಲಿ ಜರುಗಿತು. ಸಭೆಯಲ್ಲಿ ಸಂಘಟನೆಯ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವುದು, ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ಹಾಗೂ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಸುಜಯ್ ಪೂಜಾರಿ ಅವರಿಗೆ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿ ಆಯ್ಕೆ ಮಾಡಲಾಯಿತು.
ಹೊಸ ಜವಾಬ್ದಾರಿಯಂತೆ ಸುಜಯ್ ಪೂಜಾರಿ ಅವರು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕಾರವಾರ ಜಿಲ್ಲೆಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಜಿಲ್ಲೆಗಳಲ್ಲಿ ಸಂಘಟನೆಯ ಬಲವರ್ಧನೆ, ಹೊಸ ಪದಾಧಿಕಾರಿಗಳ ನೇಮಕ, ಸದಸ್ಯತ್ವ ಅಭಿಯಾನಕ್ಕೆ ವೇಗ ನೀಡುವುದು ಹಾಗೂ ಕನ್ನಡಪರ ಹೋರಾಟಗಳನ್ನು ಸಂಘಟಿಸುವ ಜವಾಬ್ದಾರಿ ಅವರ ಮೇಲಿದೆ.
ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಿಗರ ಹಿತಾಸಕ್ತಿಗಳ ರಕ್ಷಣೆಗೆ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಈ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ತಿಳಿಸಲಾಗಿದೆ.
ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ದೊರೆತ ಹಿನ್ನೆಲೆಯಲ್ಲಿ ಸುಜಯ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ. ಬಸವರಾಜ್ ಪಡುಕೋಟೆ ಅವರಿಗೆ ಹೃತ್ಪೂರ್ವಕ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಸಂಘಟನೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಕನ್ನಡ ನಾಡು-ನುಡಿಯ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದ್ದಾರೆ.
