ಇರಾ: ಉಳ್ಳಾಲ ತಾಲೂಕಿನ ಇರಾ ಆಚೆಬೈಲು ಪ್ರದೇಶದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಿಂಡಿ ಅಣೆಕಟ್ಟಿನ ತಡೆಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಇರಾ ಆಚೆಬೈಲು ಭಾಗದ ರೈತರು ಅಭಿನಂದನೆ ಸಲ್ಲಿಸಿದ್ದಾರೆ.
ಹಲವು ವರ್ಷಗಳ ಹಿಂದೆ ಚಂದ್ರಹಾಸ ಕರ್ಕೇರ ಅವರು ಇರಾ ಪಂಚಾಯತ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಜಲಸಂಪನ್ಮೂಲ ಇಲಾಖೆಯ ವತಿಯಿಂದ ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಈ ಅಣೆಕಟ್ಟು ಸ್ಥಳೀಯ ರೈತರಿಗೆ ಕೃಷಿ ಕಾರ್ಯಗಳಿಗೆ ಅನುಕೂಲವಾಗಿತ್ತು.
ಆದರೆ, ಕಳೆದ ಸುಮಾರು 15 ವರ್ಷಗಳಿಂದ ಅಣೆಕಟ್ಟಿನ ತಡೆಗೋಡೆ ಸಮರ್ಪಕವಾಗಿಲ್ಲದ ಕಾರಣ ಅದರ ಪ್ರಯೋಜನ ರೈತರಿಗೆ ಸರಿಯಾಗಿ ದೊರೆಯುತ್ತಿಲ್ಲ. ಮಳೆ ಕಡಿಮೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೃಷಿಗೆ ಅಗತ್ಯವಾದ ನೀರನ್ನು ಸಂಗ್ರಹಿಸಿಕೊಳ್ಳಲು ತಡೆಗೋಡೆಯ ದುರಸ್ತಿ ಅಥವಾ ಪುನರ್ನಿರ್ಮಾಣ ತುರ್ತಾಗಿ ನಡೆಯಬೇಕಿದೆ ಎಂದು ಸ್ಥಳೀಯ ರೈತರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಇರಾ ಆಚೆಬೈಲು ನಿವಾಸಿ ನೇಮು ಪೂಜಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕಿಂಡಿ ಅಣೆಕಟ್ಟಿನ ತಡೆಗೋಡೆ ನಿರ್ಮಾಣ ವಿಳಂಬವಾದರೆ ನೀರು ಸಂಗ್ರಹಿಸಲು ಸಾಧ್ಯವಾಗದೆ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುವ ಆತಂಕವಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.
ರೈತರ ಮನವಿಗೆ ಸ್ಪಂದಿಸಿದ ಸಚಿವರು, ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಕಿಂಡಿ ಅಣೆಕಟ್ಟಿನ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಇರಾ ಆಚೆಬೈಲು ಭಾಗದ ರೈತರು ಸಚಿವ ಯು.ಟಿ. ಖಾದರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತಡೆಗೋಡೆ ನಿರ್ಮಾಣ ಕಾರ್ಯ ಶೀಘ್ರವಾಗಿ ಪೂರ್ಣಗೊಂಡು ಕೃಷಿಗೆ ಅಗತ್ಯವಾದ ನೀರಿನ ಸೌಲಭ್ಯ ದೊರೆಯಲಿ ಎಂಬುದು ಸ್ಥಳೀಯ ರೈತರ ಆಶಯವಾಗಿದೆ.
