
“ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಎನ್ಎಸ್ಎಸ್ ಶಿಬಿರ ಜೀವನ ಪಾಠ ಕಲಿಸುತ್ತದೆ”
ಬಂಟ್ವಾಳ: ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಎದುರಿಸಿ ನಿವಾರಿಸಿಕೊಳ್ಳಲು ಹಾಗೂ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಗತ್ಯವಾದ ಜೀವನ ಪಾಠಗಳನ್ನು ಎನ್ಎಸ್ಎಸ್ ಶಿಬಿರ ಕಲಿಸುತ್ತದೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜು, ಕಾವಳಪಡೂರು ವಗ್ಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನರಾಜ್ ಅರಿಗ ಹೇಳಿದರು.
ಅವರು ಬಂಟ್ವಾಳದ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಶಿಬಿರದ ಮೂಲಕ ಪಡೆದ ಅನುಭವ, ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ವಿ.ಎಸ್. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಡಿ. ಮಂಚಿ ಮಾತನಾಡಿ, ಎನ್ಎಸ್ಎಸ್ ಶಿಬಿರಾರ್ಥಿಗಳು ಪಂಚ ಪರಿವರ್ತನೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಕಾವಳಪಡೂರು ವಗ್ಗದ ಮುಖ್ಯೋಪಾಧ್ಯಾಯರಾದ ಶೇಕ್ ಆದಂ ಸಾಹೇಬ್, ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಹಾಜಿ ಬಿ.ಎಂ. ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಶಿಬಿರಾರ್ಥಿಗಳಾದ ಗೌತಮ್, ಅಭಿಲಾಷ್, ತನ್ವಿ ಹಾಗೂ ಛಾಯಾ ತಮ್ಮ ಶಿಬಿರದ ಅನುಭವಗಳನ್ನು ಹಂಚಿಕೊಂಡರು. ಶಿಬಿರಾರ್ಥಿ ಪೂಜಿತಾ ಶಿಬಿರದ ವರದಿ ವಾಚಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಶಿಧರ್ ಎಸ್. ಸ್ವಾಗತಿಸಿದರು. ಶಿಬಿರಾಧಿಕಾರಿ ಗೀತಾ ಯು. ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ರೂಪಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.
ಎನ್ಎಸ್ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿ ಮೂಡಿಬಂದಿತು.
