ಸಂತೆಕಟ್ಟೆಯಲ್ಲಿ ಕಸದ ಹೊಗೆ ಕಿರಿಕಿರಿ : ಕಸ ಸುಡುವುದನ್ನು ನಿಲ್ಲಿಸಲು ಸಾಮಾಜಿ ಕಾರ್ಯಕರ್ತ ಸತೀಶ್‌ ಪೂಜಾರಿ ಕೀಳಂಜೆ ಆಗ್ರಹ

0
5

ಉಡುಪಿ : ಸಂತೆಕಟ್ಟೆಯ ಕಲ್ಯಾಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೌಂಟ್ ರೋಸರಿ ಚರ್ಚ್ ಕಟ್ಟಡದ ಎದುರು ಅವೈಜ್ಞಾನಿಕವಾಗಿ ಕಸವನ್ನು ರಾಶಿ ಹಾಕಿ ನಿರಂತರವಾಗಿ ಸುಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ಲಾಸ್ಟಿಕ್ ಬಾಟಲಿಗಳು ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಸುಡುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಚರ್ಚ್ ಕಟ್ಟಡದ ಎದುರು ದೀರ್ಘಕಾಲದಿಂದ ಕಸವನ್ನು ರಾಶಿ ಹಾಕಿ ಸುಡಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಕಟ್ಟಡದ ಮೇಲ್ಭಾಗದಲ್ಲಿ ಶಾಲೆ ಕಾರ್ಯಾಚರಿಸುತ್ತಿರುವುದರಿಂದ ಹೊಗೆಯಿಂದ ವಿದ್ಯಾರ್ಥಿಗಳ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಚರ್ಚ್‌ಗೆ ಪ್ರತಿದಿನ ನೂರಾರು ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಹೊಗೆ ಮತ್ತು ದುರ್ವಾಸನೆಯಿಂದ ಅವರಿಗೂ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಗಡಿ ಕೋಣೆಗಳು, ಬ್ಯಾಂಕ್ ಹಾಗೂ ಇತರ ವಾಣಿಜ್ಯ ಮಳಿಗೆಗಳ ಮಾಲೀಕರು ಕಸವನ್ನು ಒಂದೇ ಸ್ಥಳದಲ್ಲಿ ರಾಶಿ ಹಾಕಿ ಸುಡುತ್ತಿರುವುದು ಪರಿಸರದ ದೃಷ್ಟಿಯಿಂದ ಗಂಭೀರ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಸುಡುವುದರಿಂದ ಉಂಟಾಗುವ ಹೊಗೆ ವಾಯುಮಾಲಿನ್ಯಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ಇದನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಈ ಕಟ್ಟಡವು ಕಲ್ಯಾಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಪಂಚಾಯಿತಿ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಕಸ ಸುಡುವುದರಿಂದ ಉಂಟಾಗುವ ಅಪಾಯಗಳ ಕುರಿತು ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು. ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ ಕಲ್ಪಿಸಿ, ಮುಂದಿನ ದಿನಗಳಲ್ಲಿ ಕಸ ಸುಡುವುದನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರು ಆಗ್ರಹಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳು, ಚರ್ಚ್‌ಗೆ ಭೇಟಿ ನೀಡುವ ಭಕ್ತಾದಿಗಳು ಹಾಗೂ ಸ್ಥಳೀಯ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂದು ಅವರು ಮನವಿ ಮಾಡಿದ್ದಾರೆ.