
ಉಡುಪಿ: ಸುಮಾರು ₹110 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಹಳೆಯ ವೈದ್ಯಕೀಯ ಉಪಕರಣಗಳು ಹಾಗೂ ಹಳೆಯ ಬೆಡ್ಗಳನ್ನು ಅಳವಡಿಸುವ ಮತ್ತು ಅಗತ್ಯ ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡದೆ ಹಳೆಯ ಸಿಬ್ಬಂದಿಗಳನ್ನೇ ನಿಯೋಜಿಸುವ ಕ್ರಮವನ್ನು ವಿರೋಧಿಸಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಕ್ಟೋಬರ್ 20ರಂದು ನೂತನ ಜಿಲ್ಲಾ ಆಸ್ಪತ್ರೆಯ ಎದುರು ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಐದು ಅಂತಸ್ತಿನ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಸಿಬ್ಬಂದಿಯನ್ನು ನೇಮಕ ಮಾಡಿದ ಬಳಿಕವೇ ಆಸ್ಪತ್ರೆಯನ್ನು ಉದ್ಘಾಟಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹೊಸ ಆಸ್ಪತ್ರೆಯಲ್ಲಿ ಹಳೆಯ ಆಸ್ಪತ್ರೆಯ ವೈದ್ಯಕೀಯ ಉಪಕರಣಗಳು, ಶಸ್ತ್ರಚಿಕಿತ್ಸಾ ಕೊಠಡಿಗೆ ಅಗತ್ಯವಿರುವ ಹಳೆಯ ಯಂತ್ರೋಪಕರಣಗಳು, ಬೆಡ್ಗಳು ಹಾಗೂ ಶಸ್ತ್ರಚಿಕಿತ್ಸಾ ಸಾಮಗ್ರಿಗಳನ್ನು ಬಳಸುವುದರಿಂದ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶಕ್ಕೆ ಧಕ್ಕೆಯಾಗಬಹುದು ಎಂದು ಸಂಘಟನೆಯ ಮುಖಂಡರು ಆತಂಕ ವ್ಯಕ್ತಪಡಿಸಿದರು. ಹೊಸ ಆಸ್ಪತ್ರೆಯ ಸಮರ್ಪಕ ಕಾರ್ಯನಿರ್ವಹಣೆಗೆ ಸುಮಾರು 350ರಿಂದ 400 ಸಿಬ್ಬಂದಿ ಮತ್ತು ವೈದ್ಯರ ಅಗತ್ಯವಿದೆ ಎಂದು ಅವರು ತಿಳಿಸಿದರು.
ಪ್ರತಿಭಟನೆಯ ಬಳಿಕ ಸಂಘಟನೆಯ ನಿಯೋಗವು ಜಿಲ್ಲಾ ಆಸ್ಪತ್ರೆಗೆ ತೆರಳಿ ಆರ್ಎಂಒ/ಡೆಪ್ಯುಟಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್. ಅವರ ಮೂಲಕ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಅವರು, ₹110 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೊಸ ಆಸ್ಪತ್ರೆಯಲ್ಲಿ ಹಳೆಯ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿ ತರಾತುರಿಯಲ್ಲಿ ಉದ್ಘಾಟನೆ ನಡೆಸುವುದನ್ನು ತೀವ್ರವಾಗಿ ವಿರೋಧಿಸಿದರು. ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ₹9 ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನೂತನ ವೈದ್ಯಕೀಯ ಉಪಕರಣಗಳನ್ನು ಖರೀದಿಸಬೇಕು. ಈಗಾಗಲೇ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಮೇಲೆ ಹೆಚ್ಚುವರಿ ಒತ್ತಡ ಹೇರದೆ, ಹೊಸ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡಿದ ಬಳಿಕವೇ ಉದ್ಘಾಟನೆ ಮಾಡಬೇಕು ಎಂದು ಒತ್ತಾಯಿಸಿದರು.
ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯ ನಗರ ಮಾತನಾಡಿ, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ತರಾತುರಿಯ ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಿದರು. ಹೊಸ ಆಸ್ಪತ್ರೆಯಲ್ಲಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿದ ನಂತರವೇ ಉದ್ಘಾಟನೆ ನಡೆಸಬೇಕು ಎಂದು ಆಗ್ರಹಿಸಿದರು.
ಕಾಪು ಘಟಕದ ಅಧ್ಯಕ್ಷ ನಿತೀನ್ ಕುಮಾರ್ ಶೆಟ್ಟಿ ಮಾತನಾಡಿ, 250 ಹಾಸಿಗೆಗಳ ಐದು ಅಂತಸ್ತಿನ ಆಸ್ಪತ್ರೆಯಲ್ಲಿ ಹಳೆಯ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿ, ಹೊಸ ಸಿಬ್ಬಂದಿಯನ್ನು ನೇಮಕ ಮಾಡದೆ ಉದ್ಘಾಟನೆ ನಡೆಸುವ ಕ್ರಮ ಸರಿಯಲ್ಲ ಎಂದರು. ಈ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಿರ್ಮಲ ಮೆಂಡನ್ ಹಾಗೂ ಶ್ಯಾಮಲ ಅವರು ಮಾತನಾಡಿ, ನೂತನ ಜಿಲ್ಲಾ ಆಸ್ಪತ್ರೆಯನ್ನು ತರಾತುರಿಯಲ್ಲಿ ಉದ್ಘಾಟಿಸುವ ಬದಲು ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದವರು: ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯ ನಗರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಕಾಪು ಘಟಕದ ಅಧ್ಯಕ್ಷ ನಿತೀನ್ ಕುಮಾರ್ ಶೆಟ್ಟಿ, ಕಾಪು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವಿತ್ರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿರ್ಮಲ ಮೆಂಡನ್, ಜೊತೆ ಕಾರ್ಯದರ್ಶಿ ವನಿತಾ, ಜಿಲ್ಲಾ ಉಪಾಧ್ಯಕ್ಷೆ ಗಾಯತ್ರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ, ಬೈರಂಪಳ್ಳಿ ಘಟಕದ ಉಪಾಧ್ಯಕ್ಷ ಗುಣಕರ ಹಾಲಕ್ಕಿ ಸೇರಿದಂತೆ ಉದಯ್, ರವಿ, ರಮೇಶ್, ಸಂತೋಷ್ ಭಂಡಾರಿ, ಗುಲಾಬಿ ಕೋಟ್ಯಾನ್, ಹರಿಣಾಕ್ಷಿ, ರಾಜಶ್ರೀ, ಶಮಲ, ಉಷಾ ಸೋಮಶೇಖರ್ ಮತ್ತಿತರರು ಭಾಗವಹಿಸಿದ್ದರು.
