
ಪುತ್ತೂರು: ಅಕ್ಟೋಬರ್ 23ರಂದು ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾದ ಘಟನೆ ನಡೆದಿದೆ.
ಬೆದ್ರೋಡಿಯಿಂದ ಕಾಂಚನ ಕ್ರಾಸ್ವರೆಗೆ ಹೆದ್ದಾರಿಯ ವಿವಿಧೆಡೆ ಮಳೆನೀರು ರಸ್ತೆಯ ಮೇಲೆ ಹರಿದು, ರಸ್ತೆ ಮುಳುಗಡೆಯಾಗಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಹೆದ್ದಾರಿಯ ಬದಿಯಲ್ಲಿರುವ ಚರಂಡಿಗಳು ತುಂಬಿ ಹರಿದ ಪರಿಣಾಮ ಮಳೆನೀರು ರಸ್ತೆಗೆ ನುಗ್ಗಿದೆ. ನೀರು ರಸ್ತೆಯ ಮೇಲೆ ಹರಿಯುತ್ತಿದ್ದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಡಕು ಉಂಟಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ನೀರು ನಿಲ್ಲುತ್ತಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಮಳೆನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
