ಮಲ್ಪೆ–ಸಂತೆಕಟ್ಟೆ ಸಂಪರ್ಕ ರಸ್ತೆಯಲ್ಲಿ ತ್ಯಾಜ್ಯದ ಸಮಸ್ಯೆ : ಸ್ವಚ್ಛತೆಗೆ ಸಾಮಾಜಿಕ ಕಾರ್ಯಕರ್ತ ಸತೀಶ್‌ ಪೂಜಾರಿ ಕೀಳಂಜೆ ಒತ್ತಾಯ

0
8

ಉಡುಪಿ ಜಿಲ್ಲೆಯ ತೆಂಕನಿಡಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಪೆ–ಆಶೀರ್ವಾದ ಸಂಪರ್ಕ ರಸ್ತೆಯ ಲಕ್ಷ್ಮೀನಗರ ಆಟೋ ನಿಲ್ದಾಣದಿಂದ ಆಶೀರ್ವಾದ ಆಟೋ ನಿಲ್ದಾಣದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಕಸ ಹಾಗೂ ಮಾಂಸದ ತ್ಯಾಜ್ಯ ರಾಶಿ ಬಿದ್ದಿದ್ದು, ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದೆ. ಈ ಸಮಸ್ಯೆಯಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಪ್ರವಾಸಿಗರು ತೊಂದರೆ ಅನುಭವಿಸುತ್ತಿದ್ದಾರೆ.

ಸುತ್ತಮುತ್ತಲಿನ ವಸತಿ ಪ್ರದೇಶಗಳ ಕೆಲವರು ರಾತ್ರಿ ವೇಳೆ ರಸ್ತೆಯ ಬದಿಯಲ್ಲಿ ಕಸ ಮತ್ತು ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲವು ದಿನಗಳಿಂದ ತ್ಯಾಜ್ಯ ತೆರವುಗೊಳಿಸದೆ ಕೊಳೆತು ನಾರುತ್ತಿರುವುದರಿಂದ ಈ ಪ್ರದೇಶದಲ್ಲಿ ಮೂಗು ಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಲ್ಪೆ ಮತ್ತು ಸಂತೆಕಟ್ಟೆಯನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯ ಮೂಲಕ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಮಲ್ಪೆ ಬೀಚ್‌ಗೆ ಭೇಟಿ ನೀಡುವ ಸಾವಿರಾರು ಪ್ರವಾಸಿಗರು ಕೂಡ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಇಂತಹ ಪ್ರಮುಖ ರಸ್ತೆಯ ಬದಿಯಲ್ಲಿ ಕಸದ ರಾಶಿ ಕಂಡುಬರುತ್ತಿರುವುದು ಸ್ಥಳೀಯ ಆಡಳಿತದ ಸ್ವಚ್ಛತಾ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಮಾಂಸದ ತ್ಯಾಜ್ಯದಿಂದ ಬೀದಿ ನಾಯಿಗಳ ಕಾಟ ಹೆಚ್ಚಳ

ರಸ್ತೆಯ ಬದಿಯಲ್ಲಿ ಸುರಿಯಲಾಗುತ್ತಿರುವ ಮಾಂಸದ ತ್ಯಾಜ್ಯದಿಂದ ಬೀದಿ ನಾಯಿಗಳ ಸಂಖ್ಯೆ ಹಾಗೂ ಅವುಗಳ ಕಾಟ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದ ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಎದುರಾಗುತ್ತಿದೆ. ತ್ಯಾಜ್ಯದಿಂದ ಪರಿಸರ ಮಾಲಿನ್ಯ ಉಂಟಾಗುವುದರ ಜೊತೆಗೆ ಸಾರ್ವಜನಿಕರ ಆರೋಗ್ಯಕ್ಕೂ ಹಾನಿಯಾಗುವ ಭೀತಿ ಎದುರಾಗಿದೆ.

ಈ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳು ತಕ್ಷಣ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿರುವ ಕಸ ಮತ್ತು ಮಾಂಸದ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಿ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಸಿಸಿ ಕ್ಯಾಮೆರಾ, ಬೀದಿ ದೀಪ ಅಳವಡಿಸಲು ಒತ್ತಾಯ

ರಸ್ತೆಯ ಬದಿಯಲ್ಲಿ ಕಸ ಸುರಿಯುವುದನ್ನು ತಡೆಯಲು ಸೂಕ್ತ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದರ ಜೊತೆಗೆ ಸಿಸಿ ಕ್ಯಾಮೆರಾ ಹಾಗೂ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಬೇಕು. ಕಸ ಸುರಿಯುವವರನ್ನು ಗುರುತಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಮತ್ತು ಉಡುಪಿ ನಗರಸಭೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಉಡುಪಿ ನಗರವನ್ನು ಸ್ವಚ್ಛ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಮುಖ ರಸ್ತೆಗಳ ಬದಿಯಲ್ಲಿರುವ ಕಸದ ರಾಶಿಗಳನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡಲು ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಮಲ್ಪೆ–ಆಶೀರ್ವಾದ ರಸ್ತೆಯ ಸಮಸ್ಯೆಯನ್ನು ತಕ್ಷಣ ಪರಿಹರಿಸಿ ಸ್ಥಳೀಯ ನಿವಾಸಿಗಳ ಆರೋಗ್ಯ ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಕಾಪಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಹಾಗೂ ಸ್ಥಳೀಯ ನೊಂದ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.