ಕೋಟ ಜಂಕ್ಷನ್‌ನಲ್ಲಿ ಭೀಕರ ಅಪಘಾತ : ಹಿರಿಯ RSS ಮುಖಂಡ ಗುರುದಾಸ್ ಶೆಣೈ ದುರ್ಮರಣ

0
142

ಕೋಟ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖಂಡ ಗುರುದಾಸ್ ಶೆಣೈ ಮೃತಪಟ್ಟಿದ್ದಾರೆ. ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಕೋಟ ಮಣೂರು ನಿವಾಸಿ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಚಾಲಕ ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ ಗುರುದಾಸ್ ಶೆಣೈ ಅವರು ಸೈಕಲ್‌ನಲ್ಲಿ ಕೋಟ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಅತಿವೇಗವಾಗಿ ಬಂದ ಕಾರು ಸೈಕಲ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಗುರುದಾಸ್ ಶೆಣೈ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೆ ಸ್ಥಳೀಯರು ನೆರವಾಗಿದ್ದಾರೆ. ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೋಟ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.