ಎಸ್‌ಸಿಎಸ್ ಆಹ್ವಾನ್ 2K26 ಉತ್ಸವಕ್ಕೆ ರೂಪಶ್ರೀ ವರ್ಕಾಡಿ ಅವರಿಂದ ಚಾಲನೆ

0
14

ಮಂಗಳೂರು : ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾದ ಅಂತರ ಕಾಲೇಜು ಪದವಿಪೂರ್ವ ಮಟ್ಟದ ‘ಎಸ್‌ಸಿಎಸ್ ಆಹ್ವಾನ್ 2K26’ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ಅಕ್ಟೋಬರ್ 25ರಂದು ಉರ್ವದ ರಿವರ್‌ಸೈಡ್ ಕ್ಯಾಂಪಸ್‌ನಲ್ಲಿ ನಡೆಯಿತು.

ರಂಗಭೂಮಿ ಕಲಾವಿದೆ, ಚಲನಚಿತ್ರ ನಟಿ ಹಾಗೂ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತೆ ರೂಪಶ್ರೀ ವರ್ಕಾಡಿ ಅವರು ದೀಪ ಬೆಳಗಿಸುವ ಮೂಲಕ ಉತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ನಾವು ಯಾವುದೇ ಕೆಲಸ ಮಾಡಿದರೂ ಅದರ ಬಗ್ಗೆ ಪ್ರೀತಿ ಹೊಂದಿರಬೇಕು” ಎಂಬ ಮಹತ್ವದ ಸಂದೇಶವನ್ನು ನೀಡಿದರು. ಕೆಲಸವನ್ನು ಕೇವಲ ಕರ್ತವ್ಯವೆಂದು ಪರಿಗಣಿಸದೆ, ಆಸಕ್ತಿ ಮತ್ತು ಸಂತೋಷದಿಂದ ನಿರ್ವಹಿಸಿದಾಗ ನಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ಸಂಪೂರ್ಣವಾಗಿ ಅನಾವರಣಗೊಳ್ಳಲು ಸಾಧ್ಯ ಎಂದು ತಿಳಿಸಿದರು. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಆಸಕ್ತಿ, ಬದ್ಧತೆ ಮತ್ತು ನಿರಂತರ ಪರಿಶ್ರಮ ಅತ್ಯಗತ್ಯವೆಂದು ಹೇಳಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅನೇಕ ಅವಕಾಶಗಳಿವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಗುರುತಿಸಿ ಸಮರ್ಥವಾಗಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲಿಯೂ ವಿಶಿಷ್ಟವಾದ ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿಕೊಂಡು ಸೂಕ್ತ ರೀತಿಯಲ್ಲಿ ಬೆಳೆಸಿಕೊಳ್ಳುವುದು ಮುಖ್ಯ. ಭಯ ಮತ್ತು ಹಿಂಜರಿಕೆಯನ್ನು ಬದಿಗಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಗೆಲುವು ಮಾತ್ರವಲ್ಲದೆ, ಹೊಸ ಅನುಭವಗಳು, ಕಲಿಕೆ ಮತ್ತು ತಮ್ಮ ಸಾಮರ್ಥ್ಯವನ್ನು ಅರಿಯುವ ಅವಕಾಶವೂ ದೊರೆಯುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಅವರ ಸ್ಪೂರ್ತಿದಾಯಕ ಮಾತುಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ತುಂಬಿದವು. ಈ ಸಂದರ್ಭದಲ್ಲಿ ಮುಖ್ಯ ಅತಿಥಿ ರೂಪಶ್ರೀ ವರ್ಕಾಡಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಸಿಎಸ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ರಾಜನೀಶ್ ಸೊರಕೆ ಮಾತನಾಡಿ, ವಿದ್ಯಾರ್ಥಿಗಳು ಗೆಲುವೊಂದನ್ನೇ ಗುರಿಯಾಗಿಸಿಕೊಳ್ಳದೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಸೋಲಿನ ಭಯವನ್ನು ಬದಿಗಿಟ್ಟು ಧೈರ್ಯದಿಂದ ಮುನ್ನಡೆಯಬೇಕು. ಇಂತಹ ವೇದಿಕೆಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ಹಾಗೂ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಸಿಎಸ್ ರಿವರ್‌ಸೈಡ್ ಇಂಟರ್‌ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ಹೆಲೆನ್ ಲೋಬೊ, ಎಸ್‌ಸಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಜಾರಾಮ್ ರಾವ್, ಕಾರ್ಯಕ್ರಮದ ಸಲಹೆಗಾರ ಆಂಡೋ ಪಾಲ್ ಹಾಗೂ ವಿದ್ಯಾರ್ಥಿ ಸಂಯೋಜಕಿ ಕುಮಾರಿ ಸಾನ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್‌ಸಿಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಪಿ. ಚೌಹಾಣ್ ಧನ್ಯ ಅಥಿತಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಚಿತ್ರಾ ಪಿ. ಶೆಟ್ಟಿ ವಂದಿಸಿದರು.

ವಿದ್ಯಾರ್ಥಿ ಸಂಯೋಜಕಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು . ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಆಹ್ವಾನ್ 2K26ರ ಉದ್ಘಾಟನಾ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಆರಂಭವನ್ನು ನೀಡಿತು.