12 ವರ್ಷ ಪೊಲೀಸರ ಕಣ್ಣುತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0
35

ಮೂಡುಬಿದಿರೆ : ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೊಡಂಗಲ್ಲಿನ ಅನಿಲ್ ಲೋಬೋ ಎಂಬವರು ಸುಮಾರು 12 ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಜಯಂತ, ಸುರೇಶ್ ಹಾಗೂ ಅಶೋಕ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಜಯಂತ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ (LPC) ಪ್ರಕರಣ ದಾಖಲಿಸಿತ್ತು. ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ ಮೂಡುಬಿದಿರೆ ಪೊಲೀಸರು, ಆತ ಉಪ್ಪಿನಂಗಡಿಯ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದರು.

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಜೇಶ್, ಮುಹಮ್ಮದ್ ಇನ್ಸಾಲ್, ನಾಗರಾಜ್, ರೋಹಿತ್ ಹಾಗೂ ವೆಂಕಟೇಶ್ ಅವರು ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.