ಅರೆನಗ್ನನಾಗಿ ಅಲೆದಾಡುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

0
32

ಉಡುಪಿ : ನಗರದ ವಿದ್ಯಾರಣ್ಯ ಮಾರ್ಗದಲ್ಲಿ ಅರೆನಗ್ನನಾಗಿ ಅಲೆದಾಡುತ್ತಿದ್ದ ಅಪರಿಚಿತ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಶನಿವಾರ ನಡೆದಿದೆ.

ಮಾನಸಿಕ ಅಸ್ವಸ್ಥ ವ್ಯಕ್ತಿಯ ಅಸಭ್ಯ ವರ್ತನೆಯಿಂದ ಆತಂಕಗೊಂಡ ಮಹಿಳೆಯರು ಈ ಕುರಿತು ಸಾಮಾಜಿಕ ಕಾರ್ಯಕರ್ತರ ಗಮನಕ್ಕೆ ತಂದಿದ್ದರು. ತಕ್ಷಣ ಸ್ಪಂದಿಸಿದ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ ಮೇಸ್ತ ಶಿರೂರು ಅವರು ವಿದ್ಯಾರಣ್ಯ ಮಾರ್ಗಕ್ಕೆ ತೆರಳಿ, ವ್ಯಕ್ತಿಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ರಕ್ಷಿಸಲ್ಪಟ್ಟ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಈ ವ್ಯಕ್ತಿಯ ವಾರಸುದಾರರು ಅಥವಾ ಕುಟುಂಬದವರು ಇದ್ದಲ್ಲಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.