ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

0
18

ಮಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ ಅಬ್ಬರ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ನವೆಂಬರ್ 1ರಿಂದ 5ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದ ಪರಿಣಾಮ

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ವಾಯುವ್ಯ ದಿಕ್ಕಿನತ್ತ ಚಲಿಸುವ ನಿರೀಕ್ಷೆಯಿದೆ. ಅಕ್ಟೋಬರ್ 31ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಇದು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಡುವ ಸಾಧ್ಯತೆಯಿದೆ. ಬಳಿಕ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುವ ಮುನ್ಸೂಚನೆ ಇದೆ. ಇದರೊಂದಿಗೆ ಅರಬ್ಬಿ ಸಮುದ್ರದಿಂದ ಮಹಾರಾಷ್ಟ್ರ ಕರಾವಳಿವರೆಗೆ ತೇವಾಂಶಭರಿತ ಮಾರುತಗಳ ಪ್ರಭಾವವೂ ರಾಜ್ಯದ ಹವಾಮಾನದ ಮೇಲೆ ಪರಿಣಾಮ ಬೀರಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ 1 ಮತ್ತು 2ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3, 4 ಮತ್ತು 5ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 2ರಿಂದ 5ರವರೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನವೆಂಬರ್ 2 ಮತ್ತು 3ರಂದು ಗಾಳಿಯೊಂದಿಗೆ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ

ಕಲಬುರಗಿ, ಯಾದಗಿರಿ, ರಾಯಚೂರು, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ನವೆಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ

ನವೆಂಬರ್ 1ರಿಂದ 3ರವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಒಣಹವೆ ಇರಲಿದ್ದು, ಮುಂಜಾನೆ ಮಂಜು ಮುಸುಕುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ನವೆಂಬರ್ 2ರಿಂದ ಮೋಡ ಕವಿದ ವಾತಾವರಣದೊಂದಿಗೆ ಮಳೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರದ ಮುಖ್ಯಸ್ಥ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಗಮನಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.