ಕಡಬ : ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ಸರಣಿ ಮನೆಗಳ್ಳತನ ಹಾಗೂ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತು, ಕಳೆದ ಐದು ವರ್ಷಗಳಿಂದ ಪೊಲೀಸರ ಹಾಗೂ ನ್ಯಾಯಾಲಯದ ಕಣ್ಣಪ್ಪಿಸಿ ತಲೆಮರೆಸಿಕೊಂಡಿದ್ದ ಮುಂಬೈ ಮೂಲದ ಅಂತಾರಾಜ್ಯ ಆರೋಪಿಯೊಬ್ಬ ಕೊನೆಗೂ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾನೆ.
ಆರೋಪಿಯ ವಿರುದ್ಧ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಬಂಧನದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಕೀಲರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಿದ್ದ ಎನ್ನಲಾಗಿದೆ. ಆದರೆ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು, ಆತನನ್ನು ನೇರವಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದ್ದಾರೆ.
2016ರಲ್ಲಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಮನೆಗಳ್ಳತನ ಹಾಗೂ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಈತ ಪೊಲೀಸರಿಗೆ ಬೇಕಾಗಿದ್ದ ಆರೋಪಿಯಾಗಿದ್ದ. ದೀರ್ಘಕಾಲದಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆತನಿಗೆ ಇದೀಗ ನ್ಯಾಯಾಲಯದ ಆದೇಶದ ಮೂಲಕ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ.
ನ್ಯಾಯಾಲಯದ ಬಂಧನ ವಾರಂಟ್ನಿಂದ ತಪ್ಪಿಸಿಕೊಳ್ಳಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

