ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0
66

ಸಚ್ಚೇರಿಪೇಟೆಯ: ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಸಂಭ್ರಮದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡಾಂಬೆಗೆ ಗೌರವ ನಮನ ಸಲ್ಲಿಸಲಾಯಿತು.‌

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಂಡ್ಕೂರು–ಕಡಂದಲೆ ಲಯನ್ಸ್ ಕ್ಲಬ್‌ನ ಪೂರ್ವಾಧ್ಯಕ್ಷ ಲಯನ್ ಪ್ರಸನ್ನ ಶೆಟ್ಟಿ ಮಾತನಾಡಿ, ಕನ್ನಡ ಭಾಷೆಯ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ವಿವರಿಸಿದರು. ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಅಸ್ಮಿತೆ, ಸಂಸ್ಕಾರ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ ಎಂದರು.

ಲಯನ್ಸ್ ಸೇವಾ ಟ್ರಸ್ಟ್‌ನ ಸದಸ್ಯ ಲಯನ್ ರಮೇಶ್ ಶೆಟ್ಟಿ ಮಾತನಾಡಿ, ಕನ್ನಡ ನಾಡಿನ ಶ್ರೀಮಂತ ಇತಿಹಾಸ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಮುಂದಿನ ಪೀಳಿಗೆಗೆ ಕನ್ನಡದ ಮೌಲ್ಯಗಳನ್ನು ಪರಿಚಯಿಸಿ ಭಾಷಾಭಿಮಾನ ಬೆಳೆಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ಸಂಚಾಲಕ ಲ. ಕೆ. ಸತ್ಯಶಂಕರ್ ಶೆಟ್ಟಿ ಮಾತನಾಡಿ, ಕನ್ನಡ ನಮ್ಮ ಭಾವನೆ, ಬದುಕು, ಸಂಸ್ಕೃತಿ ಹಾಗೂ ಹೆಮ್ಮೆಯ ಪ್ರತೀಕ. ನಮ್ಮ ಮಾತಿನಲ್ಲಿ ಕನ್ನಡ, ಮನದಲ್ಲಿ ಕನ್ನಡದ ಅಭಿಮಾನ ಹಾಗೂ ನಡೆಯಲ್ಲಿ ಕನ್ನಡದ ಸಂಸ್ಕಾರ ಇರಬೇಕು ಎಂಬ ಸಂದೇಶ ನೀಡಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ನಾಡು ಹಾಗೂ ಸಂಸ್ಕೃತಿಯ ಬಗ್ಗೆ ಅಭಿಮಾನ ಮತ್ತು ಗೌರವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ವೇದಿಕೆಯಲ್ಲಿ ಮುಂಡ್ಕೂರು–ಕಡಂದಲೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲಯನ್ ಸುರೇಶ್ ಶೆಟ್ಟಿ, ಮುಖ್ಯ ಶಿಕ್ಷಕ ಗೌರವ್ ಆರ್. ಕೆ. ಹಾಗೂ ಲ. ಸತೀಶ್ ಪ್ರಭು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ಹಾಗೂ ಕನ್ನಡದ ಮಹಿಮೆಯನ್ನು ಸಾರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿ, ಧೃತಿ ಪೂಜಾರಿ ಸ್ವಾಗತಿಸಿದರು. ಮೋಕ್ಷಾ ವಂದಿಸಿದರು. ಕುಮಾರಿ ಕೃತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರೂಪಿಸಿದರು.
ಕನ್ನಡ ಭಾಷೆಯ ಮೇಲಿನ ಪ್ರೀತಿ, ಅಭಿಮಾನ ಹಾಗೂ ಗೌರವವನ್ನು ಸಾರಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಮೂಲಕ ಸಾರ್ಥಕವಾಗಿ ಸಂಪನ್ನಗೊಂಡಿತು.