ಮಂಜೇಶ್ವರದ ಕಾಸರಗೋಡು ಜಿಲ್ಲಾ ಕುಲಾಲ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

0
41

ಮಂಜೇಶ್ವರ: 2026-27ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕಾಸರಗೋಡು ಜಿಲ್ಲಾ ಕುಲಾಲ ಸಂಘ ಆಯ್ಕೆಯಾಗಿದೆ. ಸಮುದಾಯದ ಸಂಘಟನೆ, ಧಾರ್ಮಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಮಂಜೇಶ್ವರದ ಈ ಸಂಸ್ಥೆಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಾಸರಗೋಡು ಜಿಲ್ಲಾ ಕುಲಾಲ ಸಂಘವು ಹಲವು ವರ್ಷಗಳಿಂದ ಸಮುದಾಯದ ಸಂಘಟನೆ, ಸಾಮಾಜಿಕ ಒಗ್ಗಟ್ಟು ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಾ ಬಂದಿದೆ. ಸಮಾಜದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತನ್ನದೇ ಆದ ಗುರುತನ್ನು ಮೂಡಿಸಿದೆ.

ಪ್ರಶಸ್ತಿಯನ್ನು ಲೋಕಾಯುಕ್ತ ವಿಶೇಷ ಅಭಿಯೋಜಕರೂ ಹಾಗೂ ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷರೂ ಆದ ರವೀಂದ್ರ ಮುನ್ನಿಪ್ಪಾಡಿ ಅವರು ಪ್ರಧಾನ ಸಮಾರಂಭದಲ್ಲಿ ಸಂಘದ ಪರವಾಗಿ ಹೆಮ್ಮೆಯಿಂದ ಸ್ವೀಕರಿಸಿದರು.

ಸಂಘದ ನಿರಂತರ ಸಮಾಜಮುಖಿ ಸೇವೆಗೆ ಸಂದಿರುವ ಈ ಗೌರವವು ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮುದಾಯದ ಬಂಧುಗಳಲ್ಲಿ ಸಂತಸ ಮೂಡಿಸಿದೆ. ಪ್ರಶಸ್ತಿಗೆ ಆಯ್ಕೆಯಾದ ಸಂಸ್ಥೆಗೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.