ಆತ್ಮವಿಶ್ವಾಸ, ನಾಯಕತ್ವ ಗುಣ ವಿದ್ಯಾರ್ಥಿಗಳ ಗೆಲುವಿನ ಸೂತ್ರ: ಧನರಾಜ್ ಆಚಾರ್

0
8

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ‘ಕನಸುಗಳು–2026’ ಸಮಾರೋಪ ಸಮಾರಂಭ; 750ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ

ವಿದ್ಯಾರ್ಥಿಗಳು ಋಣಾತ್ಮಕ ಆಲೋಚನೆಗಳನ್ನು ಬದಿಗಿಟ್ಟು ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಧನಾತ್ಮಕ ಆಲೋಚನೆಗಳು ಸೃಜನಶೀಲತೆ ಹಾಗೂ ಕ್ರಿಯಾಶೀಲತೆಯ ಕೌಶಲ್ಯಗಳನ್ನು ವೃದ್ಧಿಸಲು ಸಹಕಾರಿಯಾಗುತ್ತವೆ. ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತವೆ. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನದ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಯೂಟ್ಯೂಬರ್ ಹಾಗೂ ನಟ ಧನರಾಜ್ ಆಚಾರ್ ಹೇಳಿದರು.

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ‘ಕನಸುಗಳು–2026’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 750ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಖ್ಯಾತ ವೈದ್ಯರು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ವೇಣುಗೋಪಾಲ ಶರ್ಮ ಮಾತನಾಡಿ, ಕನಸುಗಳನ್ನು ಹೊತ್ತು ಬರುವ ವಿದ್ಯಾರ್ಥಿಗಳಿಗೆ ವಿವೇಕಾನಂದದಂತಹ ಶಿಕ್ಷಣ ಸಂಸ್ಥೆ ಸಾಕಷ್ಟು ಅವಕಾಶಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬೇಕು ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಡಾ. ವೇಣುಗೋಪಾಲ ಶರ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಮಾತನಾಡಿ, ಸಂಭ್ರಮದ ಜೀವನ ಅರ್ಥಪೂರ್ಣವಾಗಬೇಕಾದರೆ ಬದುಕಿನಲ್ಲಿ ಸಂತೋಷದ ಜೊತೆಗೆ ಸಾರ್ಥಕತೆಯೂ ಇರಬೇಕು. ನಾವು ಮಾಡುವ ಕಾರ್ಯಗಳು ನಿಸ್ವಾರ್ಥತೆಯಿಂದ ಕೂಡಿದ್ದಾಗ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಬೆಂಬಲಿಸುತ್ತದೆ. ಇಂತಹ ಮೌಲ್ಯಗಳು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ರೂಪುಗೊಳ್ಳಲು ಸಾಧ್ಯ. ಶಿಕ್ಷಣ ಮತ್ತು ಸಂಸ್ಕಾರ ಎಂದಿಗೂ ಬೇರೆ ಬೇರೆಯಲ್ಲ. ಅವೆರಡೂ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಬದುಕಿಗೆ ನಿಜವಾದ ಅರ್ಥ ಬರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ.ಎನ್. ಸುಬ್ರಹ್ಮಣ್ಯ, ವತ್ಸಲಾ ರಾಜ್ಞಿ ಹಾಗೂ ಪ್ರಾಂಶುಪಾಲ ದೇವಿಚರಣ್ ರೈ ಎಂ. ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ದೀಕ್ಷಿತಾ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ದಿವ್ಯಾ ಜಿ. ವಂದಿಸಿದರು. ಹರ್ಷಿತಾ ಪಿ. ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸಂಸ್ಥೆಗಳ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.