ಹಿರಿಯ ಕಲಾವಿದರನ್ನು ಗೌರವಿಸುವ ಕಾರ್ಯ ಇನ್ನಷ್ಟು ನಡೆಯಲಿ: ಐಕಳ ಹರೀಶ್ ಶೆಟ್ಟಿ
ಸುರತ್ಕಲ್ : ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ರಂಗಭೂಮಿ ಕ್ಷೇತ್ರ ಮತ್ತಷ್ಟು ಬಲಿಷ್ಠಗೊಳ್ಳಲು ಸಾಧ್ಯ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಬಾಳ ಜಗನ್ನಾಥ ಶೆಟ್ಟಿ ಅವರ ನೇತೃತ್ವದ ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ.) ಸುರತ್ಕಲ್ ಇದರ ಸಹಯೋಗದಲ್ಲಿ ನವೆಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆದ ‘ರಂಗು ರಂಗಿನ ರಂಗೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಂಗಚಾವಡಿ ಸಂಸ್ಥೆಯು ನಿರಂತರವಾಗಿ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಜಿಲ್ಲೆಯ ಹಿರಿಯ ಹಾಗೂ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯ. ಇಂತಹ ಗೌರವಿಸುವ ಕಾರ್ಯಗಳು ಇನ್ನಷ್ಟು ನಡೆಯಲಿ ಎಂದು ಅವರು ಹಾರೈಸಿದರು.

ಇದೇ ಸಂದರ್ಭದಲ್ಲಿ 2026ನೇ ಸಾಲಿನ ಪ್ರತಿಷ್ಠಿತ ರಂಗಚಾವಡಿ ಪ್ರಶಸ್ತಿಯನ್ನು ಹಿರಿಯ ರಂಗಭೂಮಿ ಕಲಾವಿದ, ರಂಗಭೂಷಣ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ರಂಗಚಾವಡಿ ಸಂಸ್ಥೆಯು ಹಲವು ವರ್ಷಗಳಿಂದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಟೀಲು ಶ್ರೀ ಡೆವಲಪರ್ಸ್ನ ಆಡಳಿತ ನಿರ್ದೇಶಕ ಗಿರೀಶ್ ಎಂ. ಶೆಟ್ಟಿ ಕಟೀಲು ಮಾತನಾಡಿ, ರಂಗಚಾವಡಿ ಸಂಸ್ಥೆಯು ಕಲಾವಿದರನ್ನು ಬೆಳೆಸುವ ಮತ್ತು ಪ್ರೋತ್ಸಾಹಿಸುವ ಮಹತ್ವದ ಕಾರ್ಯ ಮಾಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಚಾವಡಿ ಸಂಸ್ಥೆಯ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ, ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಥಾಪನೆಯಾದ ಸಂಸ್ಥೆಯು ಅನೇಕ ಪ್ರತಿಭೆಗಳನ್ನು ಸಮಾಜಕ್ಕೆ ಪರಿಚಯಿಸಿದೆ. ಕಲಾವಿದರಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ದೊರೆತಾಗ ಯುವ ಪ್ರತಿಭೆಗಳು ಬೆಳೆಯುವುದರೊಂದಿಗೆ ರಂಗಭೂಮಿಯೂ ಬಲಿಷ್ಠಗೊಳ್ಳುತ್ತದೆ ಎಂದರು.
ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ, ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ರೂಪಶ್ರೀ ವರ್ಕಾಡಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಸಿಎ ಸುನೀಲ್ ಭಂಡಾರಿ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಈಶ್ವರ್ ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ, ಆರ್. ಧನರಾಜ್, ಚಾವಡಿಮನೆ ಜಗನ್ನಾಥ ಶೆಟ್ಟಿ, ರವಿ ರೈ ಕಲಸ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ನ್ಯಾಯವಾದಿ ಶಶಿರಾಜ್ ಕಾವೂರು ಅಭಿನಂದನಾ ಭಾಷಣ ಮಾಡಿದರು. ಲಾವಣ್ಯ ಶೆಟ್ಟಿ ಚೇಳೈರು ಪ್ರಾರ್ಥಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸ್ಟಾರ್ ವಾಯ್ಸ್ ಮೆಲೋಡೀಸ್ ತಂಡದಿಂದ ಸಂಗೀತ ಗಾನಸುಧೆ ಹಾಗೂ ಕಲಾ ಸಂಗಮ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರ ನೂತನ ಕೃತಿ ‘ಶ್ರೀಮತಿ ಸತ್ಯಭಾಮ’ ನಾಟಕದ ಉಚಿತ ಪ್ರದರ್ಶನ ನಡೆಯಿತು.
ವರದಿ: ದಿನೇಶ್ ಕುಲಾಲ್

