ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ದಾರುಣ ಸಾವು

0
57

ಬೆಳ್ತಂಗಡಿ: ಮುಂಜಾನೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಟಾಟಾ ಗೂಡ್ಸ್ ವಾಹನ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಪ್ರಾಣ ಕಳೆದುಕೊಂಡಿದ್ದಾರೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಟಾಟಾ ಗೂಡ್ಸ್ ವಾಹನವು ಚರ್ಚ್ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಮೋಟಾರ್ ಬೈಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ನಜ್ಜುಗುಜ್ಜಾಗಿವೆ. ಸ್ಕೂಟರ್ ಸವಾರನ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಾವೂರು ಗ್ರಾಮದ ಸಂತೋಷ್ (32) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ.

ಸಂತೋಷ್ ಅವರು ಮಂಗಳೂರಿನಲ್ಲಿ ಖಾಸಗಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೋಹನ್ ಅವರು ಬೆಳ್ತಂಗಡಿಯ ಪ್ರತಿಷ್ಠಿತ ಸುವರ್ಣ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಉದ್ಯೋಗಿಯಾಗಿದ್ದರು. ಇಬ್ಬರು ಯುವಕರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಪರಿಚಯಸ್ಥರಲ್ಲಿ ಶೋಕದ ಛಾಯೆ ಆವರಿಸಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಹಾಗೂ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಸಂಚಾರ ಸುಗಮಗೊಳಿಸಿದ ಪೊಲೀಸರು ಅಪಘಾತಕ್ಕೆ ಕಾರಣವಾದ ಟಾಟಾ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.