
ರಾಜಕಾಲುವೆ, ಸಾರ್ವಜನಿಕ ತೋಡು ಅಭಿವೃದ್ಧಿಗೆ ಆದ್ಯತೆ; ಯುವಕರ ಸ್ಟೇಜ್ ನಿರ್ಮಾಣಕ್ಕೂ ₹5 ಲಕ್ಷ ಅನುದಾನ
ಮಂಗಳೂರು: ಮಳೆಹಾನಿಯಿಂದ ಹಾನಿಗೊಳಗಾದ ಪ್ರದೇಶಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕರ್ನಾಟಕ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಅನುದಾನದಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ ಗ್ರಾಮದ ಶಿವನಗರದಲ್ಲಿ ₹60 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಸ್ಥಳೀಯ ಸಾರ್ವಜನಿಕರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವನಗರದ ಸಾರ್ವಜನಿಕ ತೋಡು ಹಾಗೂ ರಾಜಕಾಲುವೆಯಲ್ಲಿ ಮಳೆನೀರು ಮತ್ತು ಒಳಚರಂಡಿ ನೀರು ಸರಾಗವಾಗಿ ಹರಿಯದೆ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದರು. ಮಳೆಗಾಲದಲ್ಲಿ ಎದುರಾಗುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರಕಾರದ ಗಮನಕ್ಕೆ ತರಲಾಗಿತ್ತು. ಇದರ ಹಿನ್ನೆಲೆಯಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಸ್ಥಳೀಯರು ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜಕಾಲುವೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಐವನ್ ಡಿ’ಸೋಜಾ ಸೂಚನೆ ನೀಡಿದರು.
ಇದೇ ವೇಳೆ ಅತ್ತಾವರ ಶಿವನಗರದ ಯುವಕರ ಸ್ಟೇಜ್ ನಿರ್ಮಾಣಕ್ಕಾಗಿ ಶಾಸಕರ ನಿಧಿಯಿಂದ ₹5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಈಗಾಗಲೇ ಆರಂಭಗೊಂಡಿದೆ.
ಎಲ್ಲ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಐವನ್ ಡಿ’ಸೋಜಾ ತಿಳಿಸಿದರು.
ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಸದಾಶಿವ ಕುಲಾಲ್, ನರೇಶ್ ಶೆಟ್ಟಿ ಮಂಗಳಾದೇವಿ, ಬೂತ್ ಅಧ್ಯಕ್ಷ ಅಭಿಷೇಕ್, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ದಿನೇಶ್ ಪಾಂಡೇಶ್ವರ, ನರೇಶ್, ಮೀನಾ, ಕಮಲ್ ಹಾಗೂ ರಾಕೇಶ್ ಶೆಟ್ಟಿ ಉಪಸ್ಥಿತರಿದ್ದರು.
