ಕಾಸರಗೋಡು: ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವುದು, ಮಕ್ಕಳ ಕವಿಗಳು, ಕವಯತ್ರಿಯರು ಹಾಗೂ ಬರಹಗಾರರಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನದ ಅಂಗವಾಗಿ ಮಕ್ಕಳ ಶತಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೇರಳ ರಾಜ್ಯ ಘಟಕದ ಸಹಯೋಗದೊಂದಿಗೆ 2026ರ ನವೆಂಬರ್ 29ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ಮೀಪುಗುರಿ–ಪಾರೆಕಟ್ಟೆ ರಸ್ತೆಯ ಕನ್ನಡ ಗ್ರಾಮದಲ್ಲಿ ಈ ಗೋಷ್ಠಿ ನಡೆಯಲಿದೆ.
2019ರಲ್ಲಿ ಶಿವರಾಮ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇರಳ ರಾಜ್ಯ ಘಟಕವು ಮಕ್ಕಳ ಸಾಹಿತ್ಯ ಸಮ್ಮೇಳನ, ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಸೇರಿದಂತೆ ವಿವಿಧ ಕನ್ನಡಪರ ಹಾಗೂ ಸಾಹಿತ್ಯಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.
ಈ ಶತಕವಿಗೋಷ್ಠಿಯಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯಗಳ ಮಕ್ಕಳ ಸಾಹಿತಿಗಳು, ಕವಿಗಳು, ಕವಯತ್ರಿಯರು, ಬರಹಗಾರರು ಹಾಗೂ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳು, ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಸ್ವರಚಿತ ಕವನಗಳನ್ನು ವಾಚಿಸಲು ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕವಿಗಳಿಗೆ ಪ್ರಮಾಣಪತ್ರ, ಸ್ಮರಣಿಕೆ ಹಾಗೂ ಸಾಹಿತ್ಯ ಕೃತಿಗಳ ಕಿಟ್ ನೀಡಿ ಗೌರವಿಸಲಾಗುವುದು.
ಆಸಕ್ತರು ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ವಾಟ್ಸ್ಆ್ಯಪ್ ಮೂಲಕ ಕಳುಹಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು (ಮೊಬೈಲ್: 9448572016) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

