ಅಪಾಯಕಾರಿ ತಿರುವು, ಉಬ್ಬು ತಗ್ಗುಗಳ ರಸ್ತೆಗೆ ಮುಕ್ತಿ : ₹4.30 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

0
9

ಉಡುಪಿ: ಸಾರ್ವಜನಿಕರು ಹಾಗೂ ವಾಹನ ಸವಾರರು ಹಲವು ವರ್ಷಗಳಿಂದ ಎದುರಿಸುತ್ತಿದ್ದ ರಸ್ತೆ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿಶೇಷ ಮುತುವರ್ಜಿಯಲ್ಲಿ ಕೀಳಂಜೆ ಬಿ.ವಿ. ಹೆಗ್ಡೆ ಹಿರಿಯ ಪ್ರಾಥಮಿಕ ಶಾಲೆಯಿಂದ ಹಾವಂಜೆ ಶ್ರೀ ಮಾಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರದವರೆಗಿನ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿಗೆ ನವೆಂಬರ್ 13ರಂದು ಚಾಲನೆ ನೀಡಲಾಯಿತು.

ಸುಮಾರು ₹4.30 ಕೋಟಿ ವೆಚ್ಚದಲ್ಲಿ ನಡೆಯಲಿರುವ ಈ ಕಾಮಗಾರಿಯ ಮೂಲಕ ರಸ್ತೆಯಲ್ಲಿರುವ ಅಪಾಯಕಾರಿ ತಿರುವುಗಳು, ಉಬ್ಬು ತಗ್ಗುಗಳನ್ನು ಸರಿಪಡಿಸಿ ರಸ್ತೆ ಅಗಲೀಕರಣಗೊಳಿಸಲಾಗುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಅಪಾಯಕಾರಿ ತಿರುವುಗಳಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದೀಗ ರಸ್ತೆ ಅಭಿವೃದ್ಧಿಯಾಗುತ್ತಿರುವುದರಿಂದ ಸಂಚಾರ ಸುರಕ್ಷತೆ ಹೆಚ್ಚುವ ನಿರೀಕ್ಷೆಯಿದೆ.

ಈ ರಸ್ತೆಯ ಸಮಸ್ಯೆ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರು ನಿರಂತರವಾಗಿ ಪತ್ರಿಕೆಗಳಲ್ಲಿ ವರದಿ ಪ್ರಕಟಿಸುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿದ್ದರು. ಅಲ್ಲದೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿ ರಸ್ತೆ ಅಭಿವೃದ್ಧಿಗೆ ನಿರಂತರ ಪ್ರಯತ್ನ ನಡೆಸಿದ್ದರು. ಈ ಪ್ರಯತ್ನಗಳೂ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

ಕಾಮಗಾರಿಗೆ ಚಾಲನೆ ನೀಡಲು ಕೀಳಂಜೆ ಶಾಲೆಯ ಸಮೀಪ ಆಗಮಿಸಿದ ಶಾಸಕ ಯಶ್‌ಪಾಲ್ ಸುವರ್ಣ ಅವರನ್ನು ಹಾವಂಜೆ ಮತ್ತು ಕೀಳಂಜೆ ಗ್ರಾಮಸ್ಥರು ಹಾಗೂ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ, ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ನಡುಮನೆ, ಸತೀಶ್ ಪೂಜಾರಿ ಬಾಣೆಬೆಟ್ಟು, ಪ್ರದೀಪ್ ಶೆಟ್ಟಿ ಬಾಣೆಬೆಟ್ಟು, ಸುರೇಶ್ ಶೆಟ್ಟಿ ಮುಗ್ಗೇರಿ, ನಾಗರಾಜ್ ಮೊಗವೀರ ಕೀಳಂಜೆ, ರಾಮಚಂದ್ರ ನಾಯಕ್ ಕೀಳಂಜೆ ಹಾಗೂ ಸಮಾಜಸೇವಕ ರೋಷನ್ ಡಿಸೋಜ ಅಮ್ಮುಂಜಿ ಸೇರಿದಂತೆ ಹಲವರು ಉಪಸ್ಥಿತರಿದ್ದು, ಶಾಸಕರಿಗೆ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಪೂಜಾರಿ ಬಾಣೆಬೆಟ್ಟು ಹಾಗೂ ಉಮೇಶ್ ಶೆಟ್ಟಿ ನಡುಮನೆ ಅವರು, ಕೆ.ಜಿ. ರಸ್ತೆ–ಪೆರಡೂರು ರಸ್ತೆ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಸಾವಿರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಗೆ ಸ್ಪಂದಿಸಿ ₹4.30 ಕೋಟಿ ಅನುದಾನದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಗ್ರಾಮಸ್ಥರ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.

ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಕೈಗೆತ್ತಿಕೊಳ್ಳಲಾದ ಈ ಕಾಮಗಾರಿ ಶೀಘ್ರ ಪೂರ್ಣಗೊಂಡು ವಾಹನ ಸವಾರರಿಗೆ ಅನುಕೂಲವಾಗಲಿ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.