ಬೈಕ್ ಸವಾರರೇ ಗಮನಿಸಿ! ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್‌ಗೆ ಶೀಘ್ರದಲ್ಲೇ ನಿಷೇಧ?

0
4

ಬೆಂಗಳೂರು : ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಅಸುರಕ್ಷಿತ ಅರ್ಧ ಹೆಲ್ಮೆಟ್‌ಗಳ (Half Helmet) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕೇವಲ ಬಳಕೆಗೆ ಮಾತ್ರವಲ್ಲದೆ, ಇಂತಹ ಅಸುರಕ್ಷಿತ ಹೆಲ್ಮೆಟ್‌ಗಳ ಉತ್ಪಾದನೆ ಮತ್ತು ತಯಾರಿಕಾ ಘಟಕಗಳ ಮೇಲೆಯೂ ನಿರ್ಬಂಧ ಹೇರಲು ಸರ್ಕಾರ ಸಿದ್ಧತೆ ನಡೆಸಿದೆ.

ಈ ಕುರಿತು ನವೆಂಬರ್ 16ರಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್ ಅವರು, ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸವಾರರ ಜೀವ ರಕ್ಷಣೆಯ ದೃಷ್ಟಿಯಿಂದ ಇಂತಹ ಹೆಲ್ಮೆಟ್‌ಗಳ ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಅಧಿಕೃತ ಆದೇಶ ಹೊರಡಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2027ರ ಜನವರಿ 1ರಿಂದ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ನಿಷೇಧ ಜಾರಿಗೆ ಬರುವ ಸಾಧ್ಯತೆಯಿದೆ.

ಹೊಸ ನಿಯಮ ಜಾರಿಯಾದಲ್ಲಿ ದ್ವಿಚಕ್ರ ವಾಹನ ಸವಾರರು ಸುರಕ್ಷತಾ ಮಾನದಂಡಗಳಿಗೆ ಅನುಗುಣವಾದ ಪೂರ್ಣ ಪ್ರಮಾಣದ ಹೆಲ್ಮೆಟ್‌ಗಳನ್ನು (Full Face Helmet) ಧರಿಸುವುದು ಕಡ್ಡಾಯವಾಗಲಿದೆ.

ಅಪಘಾತಗಳ ಸಂದರ್ಭದಲ್ಲಿ ತಲೆಗೆ ಗಂಭೀರ ಗಾಯಗಳಾಗುವುದನ್ನು ತಡೆಯಲು ಪೂರ್ಣ ಪ್ರಮಾಣದ ಹೆಲ್ಮೆಟ್‌ಗಳ ಬಳಕೆ ಹೆಚ್ಚು ಸುರಕ್ಷಿತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವನೆ ಜಾರಿಗೆ ಬಂದರೆ ದ್ವಿಚಕ್ರ ವಾಹನ ಸವಾರರು ತಮ್ಮ ಹೆಲ್ಮೆಟ್‌ಗಳನ್ನು ಬದಲಾಯಿಸಿಕೊಳ್ಳಬೇಕಾಗಬಹುದು.

ಸರ್ಕಾರದ ಅಧಿಕೃತ ಆದೇಶ ಹೊರಬಿದ್ದ ಬಳಿಕ ನಿಷೇಧದ ನಿಯಮಗಳು, ದಂಡದ ಪ್ರಮಾಣ ಹಾಗೂ ಜಾರಿಯ ವಿಧಾನಗಳ ಕುರಿತು ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ.