ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕ ಹಾಗೂ ವಾಹನ ಚಾಲಕರ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ, ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಟ್ಯಾಕ್ಸಿ ಸಂಘಟನೆಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ (ರಿ.), ಮಂಗಳೂರು ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ (ರಿ.) ನೇತೃತ್ವದಲ್ಲಿ ಉಭಯ ಜಿಲ್ಲೆಗಳ ಸಮಾನ ಮನಸ್ಕ ಟ್ಯಾಕ್ಸಿ ಸಂಘಟನೆಗಳ ಸಹಯೋಗದಲ್ಲಿ ಧರಣಿ ನಡೆಯುತ್ತಿದೆ.
ಎರಡನೇ ದಿನದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಅವರು, ಟ್ಯಾಕ್ಸಿ ಚಾಲಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಅವರು ಮುಂದಿಟ್ಟಿರುವ ಸಮಸ್ಯೆಗಳಲ್ಲಿ ಯಾವುದೇ ಗೊಂದಲವಿಲ್ಲ. ಈ ಸಮಸ್ಯೆಗಳ ಪರಿಹಾರಕ್ಕಾಗಿ ಉಭಯ ಜಿಲ್ಲೆಗಳ ಸಂಸದರನ್ನು ಸಂಪರ್ಕಿಸಿ, ಸಂಬಂಧಪಟ್ಟ ವಿಮಾನ ನಿಲ್ದಾಣದ ಉನ್ನತ ಅಧಿಕಾರಿಗಳೊಂದಿಗೂ ಚರ್ಚಿಸಿ ಶೀಘ್ರ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಡಿಸೆಂಬರ್ 2ರೊಳಗೆ ಸಮಸ್ಯೆ ಬಗೆಹರಿಯದಿದ್ದರೆ ವಿಧಾನಸಭೆಯಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಿ ಧ್ವನಿ ಎತ್ತುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರ್ಕಾರ ಕಡ್ಡಾಯಗೊಳಿಸಿರುವ ವೇಗ ನಿಯಂತ್ರಕ (ಸ್ಪೀಡ್ ಗವರ್ನರ್) ಅಳವಡಿಕೆ ವಿಚಾರವನ್ನೂ ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. ಪ್ರತಿಭಟನೆಗೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ಬೆಂಬಲವಿದೆ ಎಂದು ಅವರು ತಿಳಿಸಿದರು.
ಸಾಮಾಜಿಕ ಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಅದಾನಿ ಸಂಸ್ಥೆಯು ಜನಪ್ರತಿನಿಧಿಗಳ ಮನವಿಗೂ ಸ್ಪಂದಿಸದೆ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಉಭಯ ಜಿಲ್ಲೆಗಳ ಜನರ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಎಚ್ಚರಿಸಿದರು. ವಿಮಾನ ನಿಲ್ದಾಣದಲ್ಲಿ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕವನ್ನು ಎರಡು ಮೂರು ದಿನಗಳೊಳಗೆ ಕಡಿತಗೊಳಿಸಿ ಸಮಸ್ಯೆ ಪರಿಹರಿಸದಿದ್ದರೆ, ಪುತ್ತಿಲ ಪರಿವಾರದ ನೇತೃತ್ವದಲ್ಲಿ ಉಭಯ ಜಿಲ್ಲೆಗಳ ನಾಗರಿಕರನ್ನು ಒಗ್ಗೂಡಿಸಿ ಮುಂದಿನ ಹಂತದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಿದರು.
ವಿಮಾನ ನಿಲ್ದಾಣದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಉಭಯ ಜಿಲ್ಲೆಗಳ ಸಂಸದರು ಈ ವಿಚಾರದಲ್ಲಿ ವಿಶೇಷ ಆಸಕ್ತಿ ವಹಿಸಿ ಟ್ಯಾಕ್ಸಿ ಚಾಲಕರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು.
ಮೂರನೇ ದಿನ ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರ ನೇತೃತ್ವದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಹಾಗೂ ಬಜ್ಪೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖಂಡರುಗಳು ಭೇಟಿ ನೀಡಿ ಪ್ರತಿಭಟನೆಯಲ್ಲಿ ನಿರತರಾಗಿರುವ ಚಾಲಕರಿಗೆ ಬೆಂಬಲ ಸೂಚಿಸಿದರು.
ಶಾಸಕ ಡಾಕ್ಟರ್ ಭರತ್ ಶೆಟ್ಟಿ ಮಾತನಾಡಿ ಚಾಲಕರ ಹೋರಾಟ ನ್ಯಾಯಯುತವಾಗಿದೆ ಇದರಲ್ಲಿ ಯಾವುದೇ ರಾಜಕೀಯವಿಲ್ಲ ಅದಾನಿ ಕಂಪನಿಯ ವಿರುದ್ಧ ಸಾರ್ವಜನಿಕರಿಂದಲೂ ಸಾಕಷ್ಟು ದೂರುಗಳು ಕೇಳಿ ಬಂದಿವೆ ಉಭಯ ಜಿಲ್ಲೆಗಳ ಎಲ್ಲಾ ಶಾಸಕರು ಮತ್ತು ಸಂಸದರು ಒಟ್ಟಾಗಿ ಸೇರಿ ಆದಷ್ಟು ಬೇಗನೆ ಚಾಲಕರ ಬೇಡಿಕೆಗಳನ್ನು ಈಡೇರಿಸಲು ಅದಾನಿ ಸಂಸ್ಥೆಯ ಮೇಲೆ ಒತ್ತಡ ತರುವುದಾಗಿ ತಿಳಿಸಿದರು
ಅದಾನಿ ಸಂಸ್ಥೆಗೆ ಸಾರ್ವಜನಿಕರ ಮತ್ತು ಚಾಲಕರ ಹಿತಾಸಕ್ತಿಗಿಂತ ದುಡ್ಡು ಮಾಡುವುದೇ ಅವರ ಗುರಿಯಾಗಿದೆ. ತಾವು ಆಡಿದ್ದೇ ಆಟ ಎನ್ನುವ ರೀತಿಯಲ್ಲಿ ದರ್ಪ ಮೆರೆಯುತ್ತಿದ್ದಾರೆ ಅತಿ ಶೀಘ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಶಾಸಕ ಉಮಾನಾಥ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಮೋನಪ್ಪ ಭಂಡಾರಿ ಅವರು ಬಡ ಟ್ಯಾಕ್ಸಿ ಚಾಲಕರು ಸರ್ಕಾರಕ್ಕೆ ವಿವಿಧ ರೀತಿಯ ತೆರಿಗೆಯನ್ನು ಪಾವತಿಸಿ ಎಲ್ಲಾ ನಿಯಮಗಳನ್ನು ಪಾಲಿಸಿ ನ್ಯಾಯಯುತವಾಗಿ ದುಡಿಯುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿರುವುದು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಮಾತನಾಡಿ ಆಧುನಿಕ ವ್ಯವಸ್ಥೆಯಲ್ಲಿ ಈಗಾಗಲೇ ಬಡ ಟ್ಯಾಕ್ಸಿ ಚಾಲಕರು ಹಲವು ರೀತಿಯ ವಿಪರೀತ ಸಮಸ್ಯೆಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿ ಖಾಸಗಿ ಕಂಪನಿಯೊಂದು ಬಡ ಚಾಲಕರಿಂದ ಮತ್ತು ಸಾರ್ವಜನಿಕರಿಂದ ಅವೈಜ್ಞಾನಿಕ ರೀತಿಯಲ್ಲಿ ಶುಲ್ಕ ವಸೂಲಿ ಮಾಡುತ್ತಿರುವುದು ಅಸಹನೀಯ. ಮಾನ್ಯ ಜಿಲ್ಲಾಧಿಕಾರಿಗಳು ತ್ವರಿತವಾಗಿ ಉಭಯ ಜಿಲ್ಲೆಗಳ ಶಾಸಕರು ಮತ್ತು ಸಂಸದರ ಸಮ್ಮುಖದಲ್ಲಿ ವಿಮಾನ ನಿಲ್ದಾಣದ ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಉಡುಪಿ ಮಾಜಿ ಶಾಸಕರಾದ ಶ್ರೀ ರಘುಪತಿ ಭಟ್, ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷರು, ಮುಖಂಡರು, ಉಭಯ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕರು ಮತ್ತು ಪ್ರತಿಭಟನಾಕಾರರು ಉಪಸ್ಥಿತರಿದ್ದರು.

