ಥಾರ್‌ನಲ್ಲಿ ವಿದ್ಯಾರ್ಥಿನಿ ಕರೆದೊಯ್ದ ಪ್ರಕರಣಕ್ಕೆ ಟ್ವಿಸ್ಟ್ : ಕೇರಳದಲ್ಲಿ ಯುವತಿ ಪತ್ತೆ

0
17

ಮಂಗಳೂರು : ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜು ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಪೋಷಕರು ಹಾಗೂ ಸಂಬಂಧಿಕರಿಂದಲೇ ಕರೆದೊಯ್ಯಲ್ಪಟ್ಟಿದ್ದ ವಿದ್ಯಾರ್ಥಿನಿಯನ್ನು ಮಂಗಳೂರು ಪೊಲೀಸರು ಕೇರಳದಲ್ಲಿ ಪತ್ತೆಹಚ್ಚಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಕೇರಳದ ಸಂಬಂಧಿಕರ ಮನೆಯಲ್ಲಿದ್ದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಈ ವೇಳೆ ಯುವತಿ ತಾನು ಕುಟುಂಬಸ್ಥರೊಂದಿಗೆ ತೆರಳಲು ಇಚ್ಛಿಸುವುದಿಲ್ಲ ಎಂದು ಪೊಲೀಸರಿಗೆ ಸ್ಪಷ್ಟಪಡಿಸಿದ್ದಾಳೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ದೃಶ್ಯ

ಕಣಚೂರು ವೈದ್ಯಕೀಯ ಕಾಲೇಜು ಆವರಣಕ್ಕೆ ಆಗಮಿಸಿದ್ದ ಯುವತಿಯ ಕುಟುಂಬಸ್ಥರು ಹಾಗೂ ಇತರ ಕೆಲವರು ಆಕೆಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ಸಾರ್ವಜನಿಕರ ಗಮನ ಸೆಳೆದಿದ್ದವು.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ತನಿಖೆ ಹಾಗೂ ಶೋಧ ಕಾರ್ಯ ಆರಂಭಿಸಿದ್ದರು. ಇದೀಗ ಕೇರಳದಲ್ಲಿ ಯುವತಿಯನ್ನು ಪತ್ತೆಹಚ್ಚಿ ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಯುವತಿಯ ಇಚ್ಛೆಯಂತೆ ಮುಂದಿನ ಕ್ರಮ: ಪೊಲೀಸ್ ಆಯುಕ್ತರು

ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡ ಬಳಿಕ ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡ ನಂತರ ಆಕೆಯ ಇಚ್ಛೆಯಂತೆ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗುವುದು. ಅಗತ್ಯವಿದ್ದಲ್ಲಿ ಸಾಂತ್ವನ ಕೇಂದ್ರದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಆಶ್ರಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆತರಲಾಗಿದೆ. ಈ ಅಪರಾಧಕ್ಕೆ ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸುವ ಅವಕಾಶವಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ನೋಟಿಸ್ ನೀಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಇದು ಅಪಹರಣವಲ್ಲ, ಪೋಷಕರೇ ಕರೆದುಕೊಂಡು ಹೋಗಿದ್ದು: ಡೀನ್ ಸ್ಪಷ್ಟನೆ

ಇನ್ನೊಂದೆಡೆ, ಕಣಚೂರು ವೈದ್ಯಕೀಯ ಕಾಲೇಜಿನ ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿನಿಯನ್ನು ಯಾರೋ ಅಪಹರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಆಕೆಯ ಪೋಷಕರೇ ಕಾಲೇಜಿಗೆ ಬಂದು ಕರೆದುಕೊಂಡು ಹೋಗಿದ್ದಾರೆ. ಹೀಗಾಗಿ ಇದು ಅಪಹರಣ ಪ್ರಕರಣವಲ್ಲ. ಪೋಷಕರು ವಿದ್ಯಾರ್ಥಿನಿಯನ್ನು ಕರೆದೊಯ್ದ ತಕ್ಷಣವೇ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ, ಕಾಲೇಜು ಆವರಣದಿಂದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದೊಯ್ದ ಘಟನೆ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಯುವತಿಯ ಹೇಳಿಕೆ ಹಾಗೂ ಆಕೆಯ ಇಚ್ಛೆಯ ಆಧಾರದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.